ಆಶಾ ಅನಿರ್ದಿಷ್ಟ ಹೋರಾಟ ತಾತ್ಕಾಲಿಕ ಹಿಂಪಡೆ

ಎರಡು ದಿನಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಸಿಎಂ ಭರವಸೆ 

ದಾವಣಗೆರೆ, ಜು.31- ಮಾಸಿಕ ಕನಿಷ್ಠ 12 ಸಾವಿರ ಗೌರವ ಧನ ಖಾತರಿಪಡಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದ್ದು, ಆಶಾ ಕಾರ್ಯಕರ್ತೆಯರು ಪುನಃ ತಮ್ಮ ಆರೋಗ್ಯ ಸೇವೆಗೆ ಮರಳಿದ್ದಾರೆ.

ಕಳೆದ 20 ದಿನಗಳಿಂದ ಆಶಾ ಕಾರ್ಯಕರ್ತೆಯರು ತಮಗೆ ಸರ್ಕಾರದಿಂದ ಸೂಕ್ತ ಗೌರವ ಧನ ಸಿಗುತ್ತಿಲ್ಲ. ಸರ್ಕಾರ ಈಗಲಾದರೂ ಮಾಸಿಕ ಕನಿಷ್ಠ ರೂ. 12 ಸಾವಿರ ಗೌರವ ಧನ ಮುಂದುವರೆಸುವುದು, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್-19 ಕ್ಕೆ ತುತ್ತಾದ ಆಶಾಗೆ ಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂಬ  ಬೇಡಿಕೆಗಳನ್ನಿಟ್ಟುಕೊಂಡು ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರು.

ಮೊದಲಿಗೆ ಪಿಡಿಓ, ತಹಶೀಲ್ದಾರ್, ಜಿಲ್ಲಾಧಿಕಾರಿ, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಗಮನ ಸೆಳೆದಿದ್ದರು. ತೀವ್ರ ಸ್ವರೂಪದ ಹೋರಾಟ ನಡೆಸಿ, ನಂತರ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಆಶಾ ಕಾರ್ಯಕರ್ತೆಯರ ಹೋರಾಟ ಸರ್ಕಾರದ ಗಮನಕ್ಕೆ ಬಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಸಂಘಟನೆಯ ಮುಖಂಡರೊಂದಿಗೆ ಮಾತುಕತೆ ನಡೆಸಿ, ಇನ್ನೆರಡು ದಿನಗಳಲ್ಲಿ ಆಶಾ ಕಾರ್ಯಕರ್ತೆ ಯರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಟ್ಟು ಗುರುವಾರದಿಂದ ಕೆಲಸಕ್ಕೆ ಹಾಜರಾಗಿದ್ದಾರೆ. ಭರವಸೆ ಈಡೇರದಿದ್ದಲ್ಲಿ ಹೋರಾಟದ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು ತಿಳಿಸಿದ್ದಾರೆ.

Leave a Reply

Your email address will not be published.