ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ

ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಿಕ್ಷಣ ಅವಶ್ಯ

ಈಶ್ವರಮ್ಮ  ಶಾಲೆಯ ಸಾಂಸ್ಕೃತಿಕ ಉತ್ಸವದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ

ದಾವಣಗೆರೆ, ಜ. 23-  ಭಾರ ತೀಯ ಮೌಲ್ಯಗಳ ಪರಿಕಲ್ಪನೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈಶ್ವರಮ್ಮ ಶಾಲೆಯೂ ಒಂದು ಆದರ್ಶ. ಶಾಲೆಗೆ ಕೇವಲ ಅಂಕ ಗಳಿಕೆಗಾಗಿ ಶಿಕ್ಷಣ ನೀಡದೆ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹ ಶಿಕ್ಷಣ ಗುರುತಿಸಿ ಮಕ್ಕಳಿಗೆ ನೀಡುತ್ತಿರು ವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ಹೇಳಿದರು.

ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಸಿ ಅವರು ಮಾತನಾಡಿದರು.

ಶಾಲೆಗಳು ಸಮಾಜದ ಪ್ರತಿಬಿಂಬವಾಗಿ ಕೆಲಸ ಮಾಡಿದಾಗ ಮಾತ್ರ ನಾವು ಉತ್ತಮ ಸಮಾಜವನ್ನು ನೋಡಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಈಶ್ವರಮ್ಮ ಶಾಲೆಯ ಕಾರ್ಯ ಶ್ಲಾಘನೀಯವಾದದ್ದು. ಇಲ್ಲಿ ಕಲಿಯುತ್ತಿರುವ ಮಕ್ಕಳು ಉತ್ತಮ ಅಂಕ ಗಳಿಕೆಯ ಜೊತೆಗೆ ಸಾಂಸ್ಕೃತಿಕವಾಗಿ ಕ್ರೀಡೆ ಮತ್ತು ಯೋಗದಲ್ಲಿ ಸಾಧನೆ ಮಾಡಿರುವುದನ್ನು ಗಮನಿಸಿದರೆ, ಇಲ್ಲಿ ದೊರೆಯುವ ಶಿಕ್ಷಣ ಮಗುವಿನ ವ್ಯಕ್ತಿತ್ವ ರೂಪಿಸುವ ಶಿಕ್ಷಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಈಶ್ವರಮ್ಮ ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಉಷಾ ರಂಗನಾಥ್, ಇತ್ತೀಚಿಗೆ ಮಕ್ಕಳು ಮೊಬೈಲ್ ಹಾಗೂ ಟಿವಿ ವೀಕ್ಷಣೆಯಲ್ಲಿ ಹೆಚ್ಚಿನ ಸಮಯ ಕಳೆಯುವುದರಿಂದ ಉತ್ತಮ ಶಿಕ್ಷಣ ಪಡೆಯಲು ಆಗುವುದಿಲ್ಲ. ಹೀಗಾಗಿ ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡದಂತೆ, ಟಿವಿ ವೀಕ್ಷಣೆ ಮಾಡದಂತೆ ಎಚ್ಚರ ವಹಿಸಬೇಕೆಂದರು. 

ಸತ್ಯಸಾಯಿ ಸೇವಾ ಸಂಸ್ಥೆಯ ಜಿಲ್ಲಾಧ್ಯಕ್ಷ ಪ್ರಶಾಂತ ಕುರ್ಡೇಕರ್, ಈಶ್ವರಮ್ಮ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಕೆ.ಆರ್.ಸುಜಾತ ಕೃಷ್ಣ, ಖಜಾಂಚಿ ಎ.ಪಿ.ಸುಜಾತ, ಸದಸ್ಯ ಎಂ.ವೆಂಕಟಸುಬ್ಬರಾವ್, ಪ್ರಾಂಶು ಪಾಲರಾದ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶು ಪಾಲರಾದ ಜಿ.ಎಸ್.ಶಶಿರೇಖಾ ಅವರುಗಳು ಸಮಾರಂಭದ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ನಂತರ ಮಲ್ಟಿ ಮೀಡಿಯಾ ಸಮಗ್ರ ವರದಿ ಮಂಡನೆ ಮಾಡಲಾಯಿತು. ಕಾರ್ಯಕ್ರಮದ ಬಳಿಕ ಮಕ್ಕಳು ಪ್ರಸ್ತುತಪಡಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.