ದಾವಣಗೆರೆ, ಏ.12- ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದು, ಚಿನ್ನಾಭರಣ ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಪ್ರಿಲ್ 12 ರ ಬೆಳಗ್ಗೆ 9 ಗಂಟೆಗೆ ಒಂದೇ ದಿನದಲ್ಲಿ 7 ಪ್ರಕರಣ ದಾಖಲಿಸಲಾಗಿದೆ. ದಾಖಲೆಯಿಲ್ಲದೇ ಸಾಗಿಸುತ್ತಿದ್ದ 46.01 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ 32.32 ಲಕ್ಷ ರೂ. ನಗದನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಜಿಲ್ಲೆಯಾದ್ಯಂತ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿವೆ. ಒಟ್ಟು 21 ಫ್ಲೈಯಿಂಗ್ ಸ್ಕ್ವಾಡ್, 37 ಎಸ್‍ಎಸ್‍ಟಿ ತಂಡ ಮೂರು ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. 9 ಅಬಕಾರಿ ತಂಡಗಳು ಸಹ ಜಿಲ್ಲೆಯಲ್ಲಿ ನಿಗಾವಹಿಸಿವೆ.
145 ಬಂಡಲ್ ಉಳ್ಳ ಪಾತ್ರೆಗಳು ಒಟ್ಟು ಮೌಲ್ಯ 9.26 ಲಕ್ಷ, 66.786 ಕೆಜಿ. ಬೆಳ್ಳಿ ಅಂದಾಜು ಮೌಲ್ಯ 39 ಲಕ್ಷ ರೂ. ಸೇರಿದಂತೆ 48 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
3.63 ಲಕ್ಷ ರೂ. ಮೌಲ್ಯದ 931.36 ಲೀ. ಮದ್ಯ ಹಾಗೂ 56.11 ಸಾವಿರ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.