ನವದೆಹಲಿ, ಏ. 12 – ಬರುವ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ದಾವಣಗೆರೆ ಜಿಲ್ಲೆಯ ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಇದೆ.
ದಾವಣಗೆರೆ ಉತ್ತರ ಕ್ಷೇತ್ರಕ್ಕೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಗರ ಪಾಲಿಕೆ ಮಾಜಿ ಮಹಾಪೌರರೂ ಆಗಿರುವ ಹಾಲಿ ಸದಸ್ಯ ಬಿ.ಜಿ. ಅಜಯ್ ಕುಮಾರ್, ಮಾಯಕೊಂಡಕ್ಕೆ ಮಾಜಿ ಶಾಸಕ ಎಂ. ಬಸವರಾಜ ನಾಯ್ಕ, ಚನ್ನಗಿರಿ ಕ್ಷೇತ್ರಕ್ಕೆ ತುಮ್ಕೋಸ್ ಮಾಜಿ ಅಧ್ಯಕ್ಷ ಹೆಚ್.ಎಸ್. ಶಿವಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ.
6 ಶಾಸಕರಿಗೆ ತಪ್ಪಿದ ಟಿಕೆಟ್
ಬಿಜೆಪಿ ಪ್ರಕಟಿಸಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಆರು ಹಾಲಿ ಶಾಸಕರು ಟಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಲಂಚ ಪ್ರಕರಣದಲ್ಲಿ ಸಿಲುಕಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂ ಪಾಕ್ಷಪ್ಪ ಅವರಿಗೆ ಟಿಕೆಟ್ ನಿರಾಕರಿಸ ಲಾಗಿದೆ. ಅವರ ಕುಟುಂಬದವರಿಗೂ ಟಿಕೆಟ್ ನೀಡಿಲ್ಲ.
ಮೂಡಿಗೆರೆ ಶಾಸಕ ಎಂ.ಪಿ. ಕುಮಾ ರಸ್ವಾಮಿ, ಬೈಂದೂರಿನ ಸುಕುಮಾರ ಶೆಟ್ಟಿ, ಹಾವೇರಿಯ ನೆಹರೂ ಓಲೇಕಾರ್, ಮಾಯಕೊಂಡದ ಪ್ರೊ. ಲಿಂಗಣ್ಣ ಹಾಗೂ ಕಲಘಟಗಿಯ ಸಿ.ಎಂ. ನಿಂಬಣ್ಣ ನವರ್ ಟಿಕೆಟ್ ವಂಚಿತ ಹಾಲಿ ಶಾಸಕರು.
ಹರಪನಹಳ್ಳಿ ಕ್ಷೇತ್ರಕ್ಕೆ ರೆಡ್ಡಿ
ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಹರಪನಹಳ್ಳಿ ಕ್ಷೇತ್ರಕ್ಕೆ ಹಾಲಿ ಶಾಸಕ ಕರುಣಾಕರ ರೆಡ್ಡಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ ನಿನ್ನೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ ಹರಿಹರದಿಂದ ಮಾಜಿ ಶಾಸಕ ಬಿ.ಪಿ. ಹರೀಶ್, ಜಗಳೂರಿನಿಂದ ಹಾಲಿ ಶಾಸಕ ಎಸ್.ವಿ. ರಾಮಚಂದ್ರ, ಹೊನ್ನಾಳಿಯಿಂದ ಹಾಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರುಗಳಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದಾಗಿ ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದಂತಾಗಿದೆ.