ದಾವಣಗೆರೆ, ಜೂ.4- ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನ ದಿಂದ ವಜಾ ಮಾಡಬೇ ಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಪಿ. ಮರುಳಸಿದ್ದಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಓಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು ಕಳೆದ ಏಪ್ರಿಲ್ನಿಂದ ನವದೆಹಲಿಯ ಜಂತರ್-ಮಂತರ್ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಇದುವರೆಗೂ ಸಂಸದ ಬ್ರೀಜ್ ಭೂಷಣ್ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸ್ಗೆ ದೂರು ನೀಡಿದ್ದರೂ ಸಹ ಎಫ್.ಐ.ಆರ್ ದಾಖಲಾಗಿ ರಲಿಲ್ಲ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರವಷ್ಟೇ ಎಫ್.ಐ.ಆರ್ ದಾಖಲಾಗಿದೆ. ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳವಾದರೆ ಇನ್ನು ಸಾಮಾನ್ಯ ಮಹಿಳೆಯರ ಸುರಕ್ಷತೆ ಕೇಳುವುದು ಹೇಗೆ? ದೇಶದ ಕೀರ್ತಿ ಪತಾಕೆಯನ್ನು ಹಾರಿಸಿ ಹೆಮ್ಮೆಯ ಪದಕಗಳನ್ನು ದೇಶಕ್ಕಾಗಿ ಗೆದ್ದವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ನ್ಯಾಯ ಕೇಳಲು ಹೋದವರನ್ನು ನಿಕೃಷ್ಟವಾಗಿ ನಡೆಸಿಕೊಳ್ಳಲಾಗಿದೆ. ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಕೂಡಲೇ ಪೋಕ್ಸೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಿತಿಯ ಕುರುವ ಗಣೇಶ್, ಹೊನ್ನೂರು ಮುನಿಯಪ್ಪ, ಡಿ.ಕೆ. ಭರಮಪ್ಪ, ಮರುಳಸಿದ್ದಯ್ಯ, ಹೊನ್ನೂರು ರಾಜು, ಗೋಶಾಲೆ ಬಸವರಾಜ್, ಕಣಿವೆ ಬಿಳಚಿ ಅಣ್ಣಪ್ಪ, ಕೆ.ವಿ. ರುದ್ರಮುನಿ, ಕೆ.ಜಿ. ಶೇಖರಪ್ಪ, ಬೀರಗೊಂಡನಹಳ್ಳಿ ಉಮೇಶ್, ಸಿ.ಪಿ ಕುಮದ್ವತಿ ಸೇರಿದಂತೆ ಮತ್ತಿತರರಿದ್ದರು.