ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ : ಜನರಿಗೆ ಬದುಕುವ ಭರವಸೆ ; ಎಸ್ಸೆಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ : ಜನರಿಗೆ ಬದುಕುವ ಭರವಸೆ ; ಎಸ್ಸೆಸ್

ದಾವಣಗೆರೆ, ಜೂ.18- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಜನತೆ ನೆಮ್ಮದಿಯ ಜೀವನ ನಡೆಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಸಮಿತಿ ವತಿಯಿಂದ ನಿನ್ನೆ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಈ ಹಿಂದಿನ ಸರ್ಕಾರದಲ್ಲಿ ಕೇವಲ ಜಾತಿ, ಧರ್ಮದ ವಿಷಯಗಳನ್ನು ಪ್ರಸ್ತಾಪಿಸಿ, ಜನರು ನೆಮ್ಮದಿ ಇಲ್ಲದಂತಿದ್ದರು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸುವತ್ತ ಹೆಜ್ಜೆ ಹಾಕಿದ್ದು, ಇಂದು ರಾಜ್ಯದ ಜನ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ ಎಂದು ಅವರು ಹೇಳಿದರು.

ಚುನಾವಣೆ ಪೂರ್ವದಲ್ಲಿ ಐದು ಪ್ರಮುಖ ಗ್ಯಾರಂಟಿಗಳನ್ನು ನೀಡಲಾಗಿತ್ತು. ಅದರಲ್ಲಿ ಈಗಾಗಲೇ ಒಂದು ಗ್ಯಾರಂಟಿ ಮಹಿಳೆಯರು ಉಚಿತವಾಗಿ ಬಸ್‍ನಲ್ಲಿ ಪ್ರಯಾಣಿಸುವುದಕ್ಕೆ ಅನುಮತಿ ನೀಡಿದ್ದು, ಲಕ್ಷಾಂತರ ಹೆಣ್ಣುಮಕ್ಕಳಿಗೆ ಅನುಕೂಲವಾಗಿದೆ ಎಂದರು.

ಇನ್ನು ನಾಲ್ಕು ಗ್ಯಾರಂಟಿಗಳನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು. ಬಿಜೆಪಿಗರು ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಜನತೆ ಬಿಜೆಪಿಗರ ಮಾತಿಗೆ ಕಿವಿಗೊಡಬೇಡಿ ಎಂದು ಕರೆ ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ವಂಚಿಸುತ್ತಿದ್ದು, ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಎಂದಿಗೂ ಜಾತಿ, ಧರ್ಮ ನೋಡಿ ಯೋಜನೆಗಳನ್ನು ರೂಪಿಸುವುದಿಲ್ಲ. 

ನಮ್ಮದು ಜನರ ಸರ್ಕಾರ ಜನರಿಗಾಗಿ ಒಳಿತನ್ನೇ ಮಾಡುತ್ತೇವೆ ವಿನಃ ವಂಚನೆ ಮಾಡಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇದೇ ಸಂದರ್ಭದಲ್ಲಿ ಶಾಸಕ ಎಸ್ಸೆಸ್ ಅವರು 93ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಲಾಯಿತು. 93 ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ತಂಜೀಂ ಕಮಿಟಿ ಮಾಜಿ ಅಧ್ಯಕ್ಷ ಸಾಧಿಕ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೊಡಪಾನ ದಾದಾಪೀರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಶುಭಮಂಗಳ ಮತ್ತಿತರರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಆನಂದಪ್ಪ ಎಸ್.ಎಲ್., ಮಹಾನಗರ ಪಾಲಿಕೆ ಸದಸ್ಯ ಎ.ಬಿ.ರಹೀಂ, ಬುತ್ತಿ ಗಪೂರ್ ಸಾಬ್, ಖಲಂದರ್, ಶ್ರೀಮತಿ ಗೀತಾ ಚಂದ್ರಶೇಖರ್, ರುದ್ರಮ್ಮ, ಭಾರತ್ ಕಾಲೋನಿ ಜಗದೀಶ್, ಸಾವನ್, ಪರಮೇಶ್, ನೀಲಗಿರಿಯಪ್ಪ, ದೋಣಿ ನಿಂಗಪ್ಪ, ಪೈಲ್ವಾನ್ ಹನುಮಂತಪ್ಪ, ಲಾಲ್ ಆರೀಫ್, ಅಲಿ ರೆಹಮತ್, ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!