ಚಿತ್ರದುರ್ಗ ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು

ಚಿತ್ರದುರ್ಗ ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರು

ಬೆಂಗಳೂರು, ಜು.3- ಚಿತ್ರದುರ್ಗದ ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.

ಸೋಮವಾರ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿ ಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು  ಜು.4ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಠದ ಆಡಳಿತಾಧಿ ಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ನಿರ್ದೇಶಿಸಿದೆ.

ಜಿಲ್ಲಾ ನ್ಯಾಯಾಧೀಶರು ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ಮಠ ಮತ್ತು ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಮಾತ್ರವೇ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಯಾವುದಾದರೂ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಅದರನ್ವಯ ಜಿಲ್ಲಾಧಿಕಾರಿ ತಕ್ಷಣವೇ ಅಗತ್ಯ ನೆರವು ಕಲ್ಪಿಸಬೇಕು ಎಂದು ನಿರ್ದೇಶಿಸಿದೆ. ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.

ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. 

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು, ಹೈಕೋರ್ಟ್‌ ಮೆಟ್ಟಿಲೇರಿದ್ದರು. ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆಡಳಿತಾಧಿಕಾರಿ ನೇಮಕವನ್ನು ರದ್ದುಪಡಿಸಿ,  ಮಠ-ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು. 

’ಶರಣರು ಜೈಲಿನಲ್ಲಿರುವ ಕಾರಣ, ಮಠ, ವಿದ್ಯಾಪೀಠ ಹಾಗೂ ಶೈಕ್ಷಣಿಕ ಸಂಸ್ಥೆಗಳ ಆಡಳಿತ ನಿರ್ವಹಣೆಗಾಗಿ ಮಠದ ಭಕ್ತರು, ವೀರಶೈವ, ಲಿಂಗಾಯತ ಸಮುದಾಯದ ಮುಖಂಡರು ಆರು ವಾರಗಳ ಒಳಗಾಗಿ ಮಧ್ಯಂತರ ವ್ಯವಸ್ಥೆ ಮಾಡಿಕೊಳ್ಳಬೇಕು. ಅಲ್ಲಿಯವರೆಗೆ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯನ್ನು ಮುಂದುವರೆಸಲಾಗುತ್ತಿದೆ ಎಂದು ನಿರ್ದೇಶಿಸಿತ್ತು. 

ಏಕಸದಸ್ಯ ನ್ಯಾಯಪೀಠದ ಈ ಆದೇಶವನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್‌.ಏಕಾಂತಯ್ಯ ಹಾಗೂ ಇತರರು ಮೇಲ್ಮನವಿ ಸಲ್ಲಿಸಿದ್ದರು.

error: Content is protected !!