ಬಜೆಟ್‌ನಲ್ಲಿ ಬಿಸಿಯೂಟ ತಯಾರಕರನ್ನು ಕಡೆಗಣಿಸಿದ ಕಾಂಗ್ರೆಸ್ ಸರ್ಕಾರ

ಬಜೆಟ್‌ನಲ್ಲಿ ಬಿಸಿಯೂಟ ತಯಾರಕರನ್ನು ಕಡೆಗಣಿಸಿದ ಕಾಂಗ್ರೆಸ್ ಸರ್ಕಾರ

ದಾವಣಗೆರೆ, ಜು. 9 –  ಹೊಳೆ ದಾಟಿದ ಮೇಲೆ ಅಂಬಿಗನನ್ನು ಮರೆತಂತೆ ರಾಜ್ಯ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಬಿಸಿಯೂಟ ತಯಾರಕರನ್ನು ಕಡೆಗಣಿಸಿದೆ ಎಂದು ಎಐಟಿಯುಸಿ ಸಂ ಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡ ರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂತನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಒಂದು ಲಕ್ಷದ ಇಪ್ಪತ್ತೊಂದು ಸಾವಿರ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸದೆ ಸರ್ಕಾರ ವಂಚಿಸಿದೆ. 2023ರ ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಲ್ಲಿ ಆರನೇ ಗ್ಯಾರಂಟಿಯಾಗಿ ಕ್ರಮವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಬಿಸಿಯೂಟ ತಯಾರಕರಿಗೂ ಮಾಸಿಕ 6,000 ರೂ. ವೇತನ ಕೊಡುವುದಾಗಿ ಘೋಷಿಸಿದ್ದರು. ಆದರೆ ರಾಜ್ಯದಲ್ಲಿ ದುಡಿಯುವ ಮಹಿಳೆಯರ ಮತ ಪಡೆದು, ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ದುಡಿಯುವ ಮಹಿಳೆಯರಾದ ಬಿಸಿಯೂಟ ತಯಾರಕರನ್ನು ಕಡೆಗಣಿಸಿ ವಂಚನೆ ಎಸಗಿದೆ, ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಎಸ್.ಸಿದ್ದರಾಮಯ್ಯನವರು ಕೂಡಲೇ ಬಿಸಿಯೂಟ ತಯಾರಕರಿಗೆ 6000 ರೂಪಾಯಿಗೆ ವೇತನ ಹೆಚ್ಚಿಸಬೇಕೆಂದು ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಸರ್ಕಾರವನ್ನು ಒತ್ತಾಯಿಸುತ್ತದೆ.

ದುಡಿಯುವ ಮಹಿಳೆಯರನ್ನು ಸುಳ್ಳು ಹೇಳಿ ವಂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಫೆಡರೇಷನ್ ರಾಜ್ಯ ಅಧ್ಯಕ್ಷ ಕಾಂ. ಹೊನ್ನಪ್ಪ ಮರೆಮ್ಮನವರ್ ಮತ್ತು ರಾಜ್ಯ ಖಜಾಂಚಿ ಕಾಂ. ರುದ್ರಮ್ಮ ಬೆಳಗೆರೆ ಮತ್ತು ಇತರೆ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

error: Content is protected !!