ಗರ್ಭಿಣಿ, ಮಕ್ಕಳ ಪೌಷ್ಟಿಕತೆಗೆ ಮಹತ್ವ ನೀಡಿ

ಗರ್ಭಿಣಿ, ಮಕ್ಕಳ ಪೌಷ್ಟಿಕತೆಗೆ ಮಹತ್ವ ನೀಡಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ

ದಾವಣಗೆರೆ, ಜು. 13 –  ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರದ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗುಂಜನ್ ಕೃಷ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್ ಕಚೇರಿ  ಸಭಾಂಗಣದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯ ಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕೆಲಸಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ನಮ್ಮ ಗಮನಕ್ಕೆ ತನ್ನಿ. ಏನಾದರೂ ಸಮಸ್ಯೆಗಳಿದ್ದಲ್ಲಿ  ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ. ಮುಂದಿನ ದಿನ ಗಳಲ್ಲಿ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿ ಯಿಂದ ಎಲ್ಲರೂ ಕಾರ್ಯ ನಿರ್ವಹಿಸೋಣ ಎಂದು ಹೇಳಿದರು. 

ಕೊರೊನಾ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಕಲಿಕಾ ಮಟ್ಟ ಕಡಿಮೆ ಆಗಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಶಾಲೆಯಿಂದ ಹೊರಗೆ ಇರುವ ಮಕ್ಕಳನ್ನು ಗುರುತಿಸಿ ಅವರನ್ನು ಕರೆ ತರುವ ಕೆಲಸ ಮಾಡಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯ ಪ್ರಾರಂಭದಲ್ಲಿ ಜಿಲ್ಲಾಧಿ ಕಾರಿ ಶಿವಾನಂದ ಕಾಪಶಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಅ ಭಾವ ಇಲ್ಲ.  ಹೊನ್ನಾಳಿ ತಾಲ್ಲೂಕಿನಲ್ಲಿ ಮೂರು, ನ್ಯಾಮತಿ ತಾಲ್ಲೂಕು ಒಂದು ಕಡೆ ಜನರಿಗೆ ಬೋರ್‍ವಲ್ ಬಾಡಿಗೆ ಪಡೆದು ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ 35 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ಹೊಂದಿದ್ದು, ಶೇ.62.27ರಷ್ಡು ಸಾಧನೆಯಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಸುರೇಶ್ ಬಿ. ಇಟ್ನಾಳ್ ಸಭೆಯ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ 2.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳನ್ನು ಬೆಳಯಲಾಗುತ್ತದೆ. ಈಗ ಶೇ.40ರಷ್ಟು ಬಿತ್ತನೆಯಾಗಿದ್ದು, ಮೆಕ್ಕೆಜೋಳ ಶೇ.70ರಷ್ಟು ಬಿತ್ತನೆಯಾಗಿದೆ. ಭತ್ತ ಭದ್ರಾ ನೀರು ಬಿಡುತ್ತಿದ್ದಂತೆ ಬಿತ್ತನೆಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಇಲಾಖೆಯ ಮಾಹಿತಿ ನೀಡಿದರು.

ಕೋವಿಡ್ ನಂತರ ಮಕ್ಕಳು ಶಾಲೆಗೆ ಬರುವಂತೆ ಮಾಡಲು ಸೇತುಬಂಧ ಕಾರ್ಯಕ್ರಮದ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಲಾಗಿದೆ. 187 ಮಕ್ಕಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ ಎಂದು ಡಿಡಿಪಿಐ ತಿಪ್ಪೇಶಪ್ಪ ಹೇಳಿದರು.

ಜಿಲ್ಲಾ ಪಂಚಾಯತ್  ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್,  ಮುಖ್ಯ ಲೆಕ್ಕಾಧಿಕಾರಿ ಸೌಮ್ಯಶ್ರೀ, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!