ಜಗಳೂರು, ಜು.17- ಬಸವನಕೋಟೆ ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಮೃತಪಟ್ಟ ಇಬ್ಬರು ಪೌರ ಕಾರ್ಮಿಕರಿಗೆ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ತಲಾ ಒಂದು ಲಕ್ಷ ರೂ.ಗಳ ಪರಿಹಾರವನ್ನು ಶಾಸಕ ಬಿ. ದೇವೇಂದ್ರಪ್ಪ ಅವರು ಇಂದು ವಿತರಿಸಿದರು.
ಬಸನಕೋಟೆ ಗ್ರಾಮದ ಮೃತರ ಮನೆಗಳಿಗೆ ತೆರಳಿದ ಶಾಸಕರು, ಪರಿಹಾರದ ಚೆಕ್ಕನ್ನು ವಿತರಿಸಿ, ಧೈರ್ಯ ತುಂಬಿ ಸಾಂತ್ವನ ಹೇಳಿದರು. ಗ್ರಾಮ ಪಂಚಾಯತಿಯಿಂದ ಈಗಾಗಲೇ ಮೃತ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಗಳನ್ನು ನೀಡಲಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಕುಟುಂಬಕ್ಕೆ ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಭಿಮಹೇಶ್ವರಪ್ಪ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಡಿ.ಎಂ. ರಮೇಶ್, ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಜ್ಯೋತಿರ್ಲಿಂಗಪ್ಪ ಮತ್ತು ಇತರರು ಹಾಜರಿದ್ದರು.