ಮಲೇಬೆನ್ನೂರು, ಜು. 17- ಭೀಮನ ಅಮಾವಾಸ್ಯೆ ಅಂಗವಾಗಿ ಸುಕ್ಷೇತ್ರ ಉಕ್ಕಡಗಾತ್ರಿಗೆ ಸೋಮವಾರ ಜಿಟಿ ಜಿಟಿ ಮಳೆಯಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಗದ್ದುಗೆ ದರ್ಶನ ಪಡೆದರು. ಇದಕ್ಕೂ ಮುನ್ನ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಗಂಗೆ ಪೂಜೆ ನರೆವೇರಿಸಿದರು.
ದೇವಸ್ಥಾನದಲ್ಲಿ ಈ ಬಾರಿ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಅನುಕೂಲವಾಗುವಂತೆ ಪ್ರತ್ಯೇಕವಾಗಿ ಗದ್ದುಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಜ್ಜಯ್ಯನ ದರ್ಶನಕ್ಕೆ ಸರದಿ ಸಾಲಿನಲ್ಲಿ ನಿಂತು ಬರುವ ಭಕ್ತರ ಅನುಕೂಲಕ್ಕಾಗಿ ಮೇಲ್ಛಾವಣಿಯನ್ನು ಕೂಲಿಂಗ್ ಶೀಟ್ನೊಂದಿಗೆ ನವೀಕರಿಸಲಾಗಿದೆ. ಜೊತೆಗೆ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಅದಕ್ಕಾಗಿ ಹೆಚ್ಚುವರಿ ಸಿಬ್ಬಂದಿಗಳನ್ನೂ ನೇಮಿಸಿಕೊಳ್ಳಲಾಗಿದೆ ಎಂದು ಗದ್ದುಗೆ ಟ್ರಸ್ಟ್ ಕಮಿಟಿ ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.
ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಭಕ್ತರು ನದಿಗಿಳಿಯದಂತೆ ಗೇಟ್ಗಳನ್ನು ಅಳವಡಿಸಿ, ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು.
ಮಲೇಬೆನ್ನೂರು : ಪಟ್ಟಣದ ಹೊರ ವಲಯದಲ್ಲಿ ರುವ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೂ ಅಮಾವಾಸ್ಯೆ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ ಮತ್ತು ಕೊಕ್ಕನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲೂ ಭಕ್ತರ ಸಂಖ್ಯೆ ಅಧಿಕವಾಗಿತ್ತು.