ಕಲುಷಿತ ನೀರು ಕಂಡು ಅಧಿಕಾರಿಗಳಿಗೆ ಮಾಯಕೊಂಡ ಶಾಸಕ ಬಸವಂತಪ್ಪ ತರಾಟೆ

ಕಲುಷಿತ ನೀರು ಕಂಡು ಅಧಿಕಾರಿಗಳಿಗೆ ಮಾಯಕೊಂಡ ಶಾಸಕ ಬಸವಂತಪ್ಪ ತರಾಟೆ

ದಾವಣಗೆರೆ, ಆ. 8-  ಚರಂಡಿಗಳಲ್ಲಿ ಕಲುಷಿತ ನೀರು ನಿಂತರೆ ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲವೇ ? ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ತಾಲ್ಲೂಕಿನ ಅತ್ತಿಗೆರೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಗ್ರಾಮದ ಚರಂಡಿಗಳಲ್ಲಿ ನಿಂತಿರುವ ಕಲುಷಿತ ನೀರು ಕಂಡು ಅಧಿಕಾರಿಗಳಿಗೆ ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ಗ್ರಾಮೀಣ ಜನರು ಆರೋಗ್ಯ ಕಾಪಾಡಿಕೊಳ್ಳಬೇಕಾದರೆ, ಗ್ರಾಮ ಸ್ವಚ್ಛತೆ, ಶುದ್ಧ ಕುಡಿಯುವ ನೀರು, ಚರಂಡಿಗಳ ಸ್ವಚ್ಛತೆ ಇರಬೇಕು. ಈ ರೀತಿಯ ಚರಂಡಿಗಳಲ್ಲಿ ಕಲುಷಿತ ನೀರು ನಿಂತರೆ ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ವಿವಿಧ ರೋಗಗಳಿಗೆ ತುತ್ತಾಗುತ್ತಾರೆ. ಕೂಡಲೇ ಗ್ರಾಮದ ಚರಂಡಿಗಳಲ್ಲಿ ನಿಂತ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಗ್ರಾ.ಪಂ .ಸದಸ್ಯರು, ಅಧಿಕಾರಿಗಳು ಗಮನ ಹರಿಸಬೇಕೆಂದು ಸೂಚನೆ ನೀಡಿದರು.

ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಾಸಕರು, ಶಿಕ್ಷಕರ ಹಾಜರಾತಿ ಮತ್ತು ಮಕ್ಕಳ ಕಲಿಕಾ ಸಾಮರ್ಥ್ಯದ ಬಗ್ಗೆ ಶಿಕ್ಷಕರ ಜೊತೆ ಚರ್ಚೆ ನಡೆಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸರ್ಕಾರದ ಸೌಲಭ್ಯ ಒದಗಿಸಬೇಕೆಂದು ಶಿಕ್ಷಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮದ ಎ.ಜಿ.ನಾಗಪ್ಪ, ರವಿ, ನಂದ್ಯಪ್ಪ, ಅರುಣ್ ಕುಮಾರ್, ನಿವೃತ್ತ ಪ್ರಾಂಶುಪಾಲ ಮಹಾದೇವಪ್ಪ ಇದ್ದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ರಾಮಗೊಂಡನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ, ಔಷಧ ವಿತರಣೆ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಗೆ ಬಂದ ರೋಗಿಗಳ ಬಳಿ ಇಲ್ಲಿ ಸರಿಯಾಗಿ ವೈದ್ಯಕೀಯ ತಪಾಸಣೆ ಮಾಡಲಾಗುತ್ತಿದೆಯೇ ಎಂದು ಚರ್ಚಿಸಿ ಆರೋಗ್ಯ ವಿಚಾರಿಸಿದರು. ಬಳಿಕ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣದ ನೀಲಿ ನಕಾಶೆಯ ಪರಿಶೀಲನೆ ನಡೆಸಿದರು.

ಈ ವೇಳೆ ಶರಣಪ್ಪ, ಕೆ.ಜೆ.ರಂಗನಾಥ್, ಹನುಮಂತಪ್ಪ, ಸಿದ್ದಪ್ಪ, ಮಲ್ಲಿಕಾರ್ಜುನ್, ಧರ್ಮಪ್ಪ, ಮಹೀಂದ್ರ, ವೈದ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು. 

error: Content is protected !!