ದಾವಣಗೆರೆ, ಆ. 17- ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರಿನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಕೆ.ಮಹೇಶ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯ (ಬಿಬಿಎಂಪಿ) ಕಾರ್ಯನಿರ್ವಾ ಹಕ ಎಂಜಿನಿಯರ್ ಎಸ್.ಭಾರತಿ ದಂಪತಿ ಮನೆ ಹಾಗೂ ಕಚೇರಿಗಳ ಮೇಲೆ ಗುರುವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಲೋಕಾಯುಕ್ತ ಪೊಲೀಸರಿಗೆ ಒಟ್ಟು 1.08 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಂಪತಿಗೆ ಸೇರಿದ ದಾವಣಗೆರೆಯ ಜಯನಗರದಲ್ಲಿರುವ ಮನೆಯ ಮೇಲೆ ಬೆಳಿಗ್ಗೆ 6 ಗಂಟೆ ವೇಳೆಗೆ ದಾಳಿ ನಡೆಸಿದಾಗ ಮನೆಯಲ್ಲಿ 15 ಲಕ್ಷ ನಗದು ಹಾಗೂ ಸುಮಾರು 900 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ.
ಹೊಳಲ್ಕೆರೆಯ ಮಹೇಶ್ ಅವರ ಕಚೇರಿ ಮತ್ತು ಭಾರತಿ ಅವರ ಬೆಂಗಳೂರಿನ ಬಿಬಿಎಂಪಿ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದೂರು ಬಂದಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ಜಮೀನು, ತೋಟ ಸೇರಿ ಇತರೆ ಆಸ್ತಿ ಇರುವುದು ಗೊತ್ತಾಗಿದೆ. ದಾಳಿ ಮುಂದುವರೆದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಧ್ಯಮದವರಿಗೆ ತಿಳಿಸಿದ್ದಾರೆ.