ದಾವಣಗೆರೆ, ಆ. 27- ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರುವುದಿಲ್ಲ. ಅವರೊಂದಿಗಿನ ಭೇಟಿ ಸೌಹಾರ್ದಯುತವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಎಲ್ಲರನ್ನೂ ಭೇಟಿ ಮಾಡಿದಂತೆ ನನ್ನನ್ನೂ ಭೇಟಿ ಮಾಡಿದ್ದಾರೆ. ಟೀ ಕುಡಿದು, ವಿಶ್ ಮಾಡಿ ಹೋದರು ಅಷ್ಟೇ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು. ಪಕ್ಷದ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ಯಡಿಯೂರಪ್ಪಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದರು. ಅಲ್ಲದೇ ದಾವಣಗೆರೆಯಿಂದ ತಾನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದೇನೆ ಎಂದೂ ಹೇಳಿದರು.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಯಾರು ಬಂದರೂ ಸ್ವಾಗತಿಸುವುದಾಗಿ ಸಚಿವರು ಹೇಳಿದರು.
ಪ್ರಭಾ ಮಲ್ಲಿಕಾರ್ಜುನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಈ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದು ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದರು. ಬರಪೀಡಿತ ಪ್ರದೇಶಗಳ ಘೋಷಣೆಗೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ಈ ಬಗ್ಗೆ ರಾಜ್ಯ ಸರ್ಕಾರವೂ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.