ಹರಿಹರ, ಆ. 30 – ಸಾರಥಿ ಬಳಿ ಯೂರಿಯಾ ಮತ್ತು ರಸಗೊಬ್ಬರ ಕಾರ್ಖಾನೆ ಘಟಕ ಸ್ಥಾಪಿಸುವ ಬಗ್ಗೆ ಇರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಇತ್ಯರ್ಥ ಪಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಹೇಳಿದ್ದಾರೆ.
ನಗರದ ಆರೋಗ್ಯ ಮಾತೆ ಚರ್ಚ್ಗೆ ಆಗಮಿಸಿದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಸದ ಜಿ.ಎಂ. ಸಿದ್ದೇಶ್ವರ ಅವರು ಬಿಜೆಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಥಿ ಹತ್ತಿರದ ಕೆ.ಐ.ಡಿ.ಬಿ. ಜಾಗದಲ್ಲಿ ಯೂರಿಯಾ ಮತ್ತು ರಸಗೊಬ್ಬರ ಕಾರ್ಖಾನೆಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಆದರೆ, ಕಾರ್ಖಾನೆ ಏಕೆ ಸ್ಥಾಪನೆ ಆಗಿಲ್ಲ ಎಂಬ ಬಗ್ಗೆ ಮಾಹಿತಿ ಪಡೆಯುವುದಾಗಿ ಹೇಳಿದರು.
ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಸಾರ್ವಜನಿಕರಿಗೆ ರೈಲ್ವೆ ಗೇಟ್ನಿಂದ ತೊಂದರೆ ಆಗುವುದನ್ನು ತಪ್ಪಿಸಲು ಫ್ಲೈ ಓವರ್ ಜೊತೆಗೆ, ಪಕ್ಕದಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಹರಿಹರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿತ್ತು ಎಂದು ಸಚಿವರು ಹೇಳಿದರು.
ದರ್ಗಾ ಮುಂದಿನ ರಸ್ತೆಯನ್ನು ದುರಸ್ತಿ ಮಾಡಲು ಅಧಿಕಾರಿಗಳ ಬಳಿ ಚರ್ಚೆ ಮಾಡುವೆ. ಜೊತೆಗೆ ಟ್ರಾಫಿಕ್ ಪೊಲೀಸ್ ಠಾಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಬಳಿ ಮಾತನಾಡಿ ಸುಗಮ ಸಂಚಾರ ವ್ಯವಸ್ಥೆ ಮಾಡುವುದಾಗಿ ಭರವಸೆಯನ್ನು ನೀಡಿದರು.