ನಗರದಲ್ಲಿ ನಾಳೆ ಕಾನೂನು ಅರಿವು ಸಾಕ್ಷರತಾ ಜಾಥಾ

ದಾವಣಗೆರೆ, ನ. 7 – ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ನಾಡಿದ್ದು ದಿನಾಂಕ 9ರಂದು ಕಾನೂನು ಅರಿವು ಸಾಕ್ಷರತಾ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

‘ಪ್ಲಾಸ್ಟಿಕ್ ಮುಕ್ತ ಪರಿಸರ, ಪೋಕ್ಸೋ  ಕಾನೂನು ಅರಿವು, ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು, ಬಾಲ ಕಾರ್ಮಿಕ ಪದ್ಧತಿ ವಿರೋಧ ಹಾಗೂ ರಾಷ್ಟ್ರೀಯ ಸಂಚಾರಿ ನಿಯಮ ಉಲ್ಲಂಘನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ 9ಕ್ಕೆ ನಗರದ ಹೈಸ್ಕೂಲ್ ಮೈದಾನದಿಂದ ಜಾಥಾ ಆರಂಭ ವಾಗಲಿದ್ದು, ವಿದ್ಯಾರ್ಥಿಗಳನ್ನು 4 ತಂಡಗಳಾಗಿ ವಿಂಗಡಣೆ ಮಾಡಲಾಗುವುದು. 800ರಿಂದ 1000 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್.ಬಿ ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್, ಆರ್.ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಯತೀಶ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ್ ಇತರರು ಪಾಲ್ಗೊಳ್ಳುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್, ಆರ್.ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಯತೀಶ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜ ಗೋಪಾನಾಳ್, ಕಾರ್ಯದರ್ಶಿ ಬಸವರಾಜ್.ಎಸ್,  ಮಂಜುನಾಥ್, ಲಿಂಗರಾಜ್, ರಮೇಶ್, ವಿದ್ಯಾಧರ್ ಹಾಗು ಇತರರು ಇದ್ದರು.

error: Content is protected !!