ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯ, ಸಂಶೋಧನಾ ಮತ್ತು ಅಡಿಪಾಯದ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಒಂದು ದಿನದ ಮಧ್ಯ ಕರ್ನಾಟಕ ಕೈಗಾರಿಕೋದ್ಯಮ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಕೈಗಾರಿಕೋದ್ಯಮ ಸಭೆಯಲ್ಲಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 50 ಕ್ಕು ಹೆಚ್ಚು ಕೈಗಾರಿಕೋದ್ಯಮಿಗಳು ಭಾಗವಹಿಸುತ್ತಿದ್ದು, ಯಾಂತ್ರಿಕ, ಸಿವಿಲ್, ವಿದ್ಯುತ್, ಎಲೆಕ್ಟ್ರಾನಿಕ್ಸ್, ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಸಂಬಂಧಪಟ್ಟ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ವಿದ್ಯಾಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ.ಇ. ರಂಗಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇಲ್ಲಿ ಪ್ರಾದೇಶಿಕ ಅಧಿಕಾರಿಗಳಾದ ಡಾ.ಹೆಚ್. ಲಕ್ಷ್ಮೀಕಾಂತ, ಮತ್ತು ಜಿಲ್ಲಾ ಕೈಗಾರಿಕಾ ಮಂಡಳಿ, ದಾವಣಗೆರೆಯ ನಿರ್ದೇಶಕ ರಾಜೇಂದ್ರ ನಾಮದೇವ್ ಕದಮ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಡಿ.ಪಿ.ನಾಗರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ಯಾಂತ್ರಿಕ ವಿಭಾಗದ ಪ್ರಾಧ್ಯಾಪಕ ಡಾ. ಶೇಖರಪ್ಪ ಬಿ. ಮಲ್ಲೂರು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ ಸಂಶೋಧನೆ ಹಾಗೂ ಅಡಿಪಾಯದ ಮುಖ್ಯಸ್ಥ ಸಂತೋಷ ಇಟ್ಟಗಿ ಕಾರ್ಯಕ್ರಮದ ಸಂಯೋಜನಾಧಿಕಾರಿಗಳಾಗಿದ್ದಾರೆ.