ರಿಪ್ಪನ್ಪೇಟೆ, ನ. 24 – ತೀರ್ಥಹಳ್ಳಿ ತಾಲ್ಲೂಕು ಶ್ರೀಮದ್ ರಂಭಾಪುರಿ ಖಾಸಾ ಶಾಖಾ ಮಹಾಸಂಸ್ಥಾನ ಮಳಲಿ ಮಠದಲ್ಲಿ ನಾಡಿದ್ದು ದಿನಾಂಕ 26ರ ರವಿವಾರ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಡಾ. ವೀರ ಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಡಾ. ಗುರುನಾಗ ಭೂಷಣ ಶಿವಾಚಾರ್ಯ ಸ್ವಾಮಿಗಳವರ ಶ್ರೀ ಗುರು ಪಟ್ಟಾಧಿಕಾರ ರಜತ ಮಹೋತ್ಸವ ಹಾಗೂ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ ಜರುಗುವುದು.
ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು, ಅಧ್ಯಕ್ಷ ಮುಕ್ತಿಮಂದಿರ ಕ್ಷೇತ್ರದ ಶ್ರೀ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸುವರು.
ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಸದಾಶಯ ನುಡಿಯುವರು.
ಮಳಲಿಯ ಡಾ. ಗುರುನಾಗಭೂಷಣ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ‘ಸುದ್ದಿ ಸಂಪದ’ ಬಿಡುಗಡೆಗೊಳಿ ಸುವರು. ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ ದಿನದರ್ಶಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಹರತಾಳು ಹಾಲಪ್ಪ, ಡಾ.ಆರ್.ಎಂ. ಮಂಜು ನಾಥಗೌಡ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಲೋಕ ಕಲ್ಯಾಣಾರ್ಥವಾಗಿ ಪ್ರದೇಶಾಭಿವೃದ್ಧಿಗಾಗಿ ಶ್ರೀ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ನಡೆಯುವುದು.