ಬೆಳಗಾವಿ ಅಧಿವೇಶನದಲ್ಲಿ ಉತ್ತರಿಸಲು ಸಿದ್ಧರಿದ್ದೇವೆ : ಸಿಎಂ

ಹಾವೇರಿ, ನ. 29-  ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಅಧ್ಯಕ್ಷರ ನೇಮಕಾತಿಗೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ, ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದರು.

ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು. ಹಾವೇರಿ ಜಿಲ್ಲೆಗೆ ಕುಡಿಯುವ ನೀರು, ಮೇವು, ಉದ್ಯೋಗ ಸೇರಿದಂತೆ ವಿವಿಧ ಕಾರ್ಯಗಳಿಗೆ 226 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಇಡೀ ದೇಶದಲ್ಲಿ 12 ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿಯಿದೆ. ರಾಜ್ಯಕ್ಕೆ ಬರ ಅಧ್ಯಯನಕ್ಕಾಗಿ ಬಂದ ಕೇಂದ್ರ ತಂಡ ಪರಿಶೀಲಿಸಿದೆ. ಆದರೂ ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯದ ದುಡ್ಡನ್ನು ರಾಜ್ಯಕ್ಕೆ ಬಿಡುಗಡೆ ಮಾಡುತ್ತಿಲ್ಲ ಎಂದರು.

error: Content is protected !!