ದಾವಣಗೆರೆ, ಡಿ. 15- ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದಿಂದ ನಗರದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾ ರಂಭವು ನಾಳೆ ದಿನಾಂಕ 16ರಂದು ನಡೆಯಲಿದೆ ಎಂದು ಸಮಾ ಜದ ಅಧ್ಯಕ್ಷ ಡಾ.ಕೊಟ್ರೇಶ್ ಬಿದ್ರಿ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 11 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾ ಚಾರ್ಯ ಮಹಾಸ್ವಾಮೀಜಿ, ಶಿರಹಟ್ಟಿ ಭಾವೈಕ್ಯತಾ ಮಹಾ ಸಂಸ್ಥಾನ ಪೀಠದ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮೀಜಿ ವಹಿಸಲಿದ್ದಾರೆ ಎಂದು ಹೇಳಿದರು.
ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ವಿವಿಧ ಸಚಿವರು, ಶಾಸಕರುಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ನೀಲಕಂಠಪ್ಪ, ಬಿ.ಜಿ. ಶಂಕರ್ ಪಾಟೀಲ್, ಖಜಾಂಚಿ ಜೆ.ಬಿ. ಲೋಕೇಶ್, ಕಾರ್ಯದರ್ಶಿ ಜಗದೀಶ್ ಇತರರು ಉಪಸ್ಥಿತರಿದ್ದರು.