ಬಿಜೆಪಿಗೆ ಮಾಡಾಳ್ ಮಲ್ಲಿಕಾರ್ಜುನ್ ಸೇರ್ಪಡೆ

ಬಿಜೆಪಿಗೆ ಮಾಡಾಳ್ ಮಲ್ಲಿಕಾರ್ಜುನ್ ಸೇರ್ಪಡೆ

ಬೆಂಗಳೂರು, ಫೆ. 7- ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಸೇರಿದಂತೆ ಹಲವು ಮುಖಂಡರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಚನ್ನಗಿರಿ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿ ಬಂಡಾಯ ಅಭ್ಯರ್ಥಿಯಾಗಿ ಮಾಡಾಳ್ ಮಲ್ಲಿಕಾರ್ಜುನ್ ಪಕ್ಷೇತರರಾಗಿ ಕಣಕ್ಕಿಳಿದು ಸೋಲು ಕಂಡಿದ್ದರು. 

ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ 6 ವರ್ಷ ಉಚ್ಚಾಟನೆಗೊಂಡಿದ್ದ ಅವರು ಇದೀಗ ಪಕ್ಷಕ್ಕೆ ಪುನಃ ಮರಳಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿಗೆ ಶಕ್ತಿ ತುಂಬಲು ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮಾಡಾಳ್ ಮಲ್ಲಿಕಾರ್ಜುನ್, ಡಾ. ರವಿಕುಮಾರ್, ಗುರುಸಿದ್ದನಗೌಡ ಅವರು ಬಿಜೆಪಿ ಸೇರಿದ್ದು ಸಂತಸ ತಂದಿದೆ ಎಂದು ತಿಳಿಸಿದರು.

ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!