ದಲಿತರಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಬಳಕೆಗೆ

ದಲಿತರಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಬಳಕೆಗೆ

ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ

ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗದ ಪಿ.ಬಿ. ರಸ್ತೆಯಲ್ಲಿ ರಾಜ್ಯ ಸರ್ಕಾರದ ಪ್ರತಿಕೃತಿ ನಿರ್ಮಿಸಿ, ನೇಣು ಹಾಕುವಂತೆ ಅಣಕು ಪ್ರದರ್ಶನ

ದಾವಣಗೆರೆ, ಮಾ.23- ದಲಿತರಿಗೆ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ ಎಂದು ಆರೋಪಿಸಿ, ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ  ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾ  ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ  ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಈ ಸಂದರ್ಭದಲ್ಲಿ ಆರೋಪಿಸಿದರು.

ಗ್ಯಾರಂಟಿ ಯೋಜನೆಯ ಸಲುವಾಗಿ ಸರ್ಕಾರ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದೆ.  ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿದೆ. ಕಿಸಾನ್ ಸಮ್ಮಾನ್‌ ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ 4,000 ರೂ.ಗಳಿಗೂ ಕತ್ತರಿ ಪ್ರಯೋಗವಾಗಿದೆ. ಸಿದ್ದರಾಮಯ್ಯನವರು ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ. ಆದರೆ, ಅದು ಬರೀ ಬಾಯಿಮಾತಿಗೆ ಸೀಮಿತವಾಗಿದೆ ಎಂದರು.

ದಲಿತರಿಗೆ ಮೀಸಲಿಟ್ಟಿದ 11,144ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿದೆ. ದಲಿತರ ಹಿತ ಬಲಿ ಕೊಟ್ಟು  ಕಾಂಗ್ರೆಸ್ ತನ್ನ ಸ್ವಾರ್ಥ ಸಾಧನೆ ಪೂರೈಸಿಕೊಂಡು ಢೋಂಗಿ ದಲಿತ ಕಾಳಜಿ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಬಸವರಾಜ ನಾಯ್ಕ ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು 2024-25ನೇ ಮುಂಗಡ ಪತ್ರದಲ್ಲಿ  ಮತ್ತೆ ಹನ್ನೊಂದು ಸಾವಿರ ಕೋಟಿ ರೂ. ಅನುದಾನ ಕಡಿತಗೊಳಿಸಲಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರ್ಕಾರ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ದಲಿತರ ಹಿತಾಸಕ್ತಿಗಿಂತ ಮತ ಬ್ಯಾಂಕ್ ರಾಜಕಾರಣ ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ. ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ 10,000 ಕೋಟಿ ಹಣ ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿ ಯೋಜನೆಯೂ ಅಡ್ಡಿಯಾಗಿಲ್ಲ ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಆರೋಪಿಸಿದರು.

ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್, ಮಾಜಿ ಮುಖ್ಯ ಸಚೇತಕ ಡಾ. ಶಿವಯೋಗಿಸ್ವಾಮಿ, ಪಾಲಿಕೆ ವಿರೋಧ ಪಕ್ಷದ ನಾಯಕ ಕೆ. ಪ್ರಸನ್ನ ಕುಮಾರ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಧನಂಜಯ ಕಡ್ಲೇಬಾಳ್, ಐರಣಿ ಅಣ್ಣೇಶ್, ಕೊಳೇನಹಳ್ಳಿ ಬಿ.ಎಂ. ಸತೀಶ್, ಅನಿಲ್ ಕುಮಾರ್ ನಾಯಕ್, ಅನೀತ ಕುಮಾರ ಜಿ. ಎಸ್, ಎಸ್.ಟಿ. ವೀರೇಶ್, ವೀರೇಶ್ ಹನಗವಾಡಿ, ಬಾತಿ ವೀರೇಶ್,  ಮಂಜಾನಾಯಕ, ವಿಶ್ವಾಸ್ ಹೆಚ್.ಪಿ, ಶಿವನಗೌಡ ಟಿ. ಪಾಟೀಲ್, ಹನುಮಂತ ನಾಯಕ, ಗಂಗಾಧರ ಜಿ.ವಿ., ಕೃಷ್ಣಪ್ಪ, ಪಿ.ಸಿ. ಶ್ರೀನಿವಾಸ್, ಬೇತೂರ್ ಸಂಗಪ್ಪ, ಕೊಟ್ರೇಶ್ ಗೌಡ, ಚಂದ್ರಕಲಾ, ರೂಪಾ ಕಾಟ್ವೆ ಇತರರು ಪ್ರತಿಭಟನೆಯಲ್ಲಿದ್ದರು.

error: Content is protected !!