ರಾಜ್ಯ ಪತ್ರಕರ್ತರ ಸಮ್ಮೇಳನ ಅಭೂತಪೂರ್ವ ಯಶಸ್ವಿ

ರಾಜ್ಯ ಪತ್ರಕರ್ತರ ಸಮ್ಮೇಳನ ಅಭೂತಪೂರ್ವ ಯಶಸ್ವಿ

ಕಾರ್ಯನಿರತ ಪತ್ರಕರ್ತರ ಸಂಘ ಕೃತಜ್ಞತೆ

ದಾವಣಗೆರೆ, ಮಾ.3- ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 38ನೇ ರಾಜ್ಯ ಸಮ್ಮೇಳನವು ದಾವಣಗೆರೆಯಲ್ಲಿ ಅಭೂತಪೂರ್ವ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಶಕಗಳ ನಂತರ ನಗರದಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆರಂಭದಲ್ಲಿ ಸಮ್ಮೇಳನ ನಡೆಯುತ್ತದೋ, ಇಲ್ಲವೋ ಎಂಬ ಅನುಮಾನಗಳಿದ್ದವು. ಆದರೆ ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು ಎಂದರು.

ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಅರ್ಥಪೂರ್ಣ ಗೋಷ್ಠಿಗಳು ನಡೆದವು. ಸುಮಾರು  5 ರಿಂದ 6 ಸಾವಿರ ಜನರು ಭಾಗವಹಿಸಿದ್ದರು. ಬಂದಿದ್ದವರಿಂದ ಊಟ, ವಸತಿ ಸೇರಿದಂತೆ ಎಲ್ಲಾ ವ್ಯವಸ್ಥೆ ಬಗ್ಗೆ ಶ್ಲ್ಯಾಘನೆ ವ್ಯಕ್ತವಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಎಂಟು ನಿರ್ಣಯಗಳನ್ನು ಕೈಗೊಂಡು ಹಕ್ಕೊತ್ತಾಯ ಮಂಡಿಸಲಾಗಿತ್ತು. ಈ ಪೈಕಿ ಮುಖ್ಯಮಂತ್ರಿಗಳು ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಸೌಲಭ್ಯದ ಬಗ್ಗೆ ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಬೆಂಗಳೂರು ಹೊರತು ಪಡಿಸಿ ಎಲ್ಲಾ ಜಿಲ್ಲೆಯ ಪತ್ರಕರ್ತರೂ ಸಹ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು.

ಪತ್ರಕರ್ತರಿಗೆ ಯಶಸ್ವಿನಿ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಒತ್ತಾಯಿಸಿದ್ದೇವೆ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ತಗಡೂರು ಹೇಳಿದರು.

ಸಮ್ಮೇಳನದ ಯಶಸ್ಸಿಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾ ರ್ಜುನ್ ಅವರೂ ಸೇರಿದಂತೆ ಎಲ್ಲಾ ದಾನಿಗಳಿಗೂ, ಸಹಕಾರ ನೀಡಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿ ಗಳು, ಕಾ.ನಿ.ಪ. ಸಂಘ ಹಾಗೂ ಜಿಲ್ಲಾ ವರದಿ ಗಾರರ ಕೂಟದ ಪದಾಧಿಕಾರಿಗಳು, ಸದಸ್ಯರು ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ, ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ಖಜಾಂಚಿ ಎನ್.ವಿ. ಬದರಿನಾಥ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ, ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ವರದರಾಜ್ ಇತರರಿದ್ದರು.

error: Content is protected !!