ದಾವಣಗೆರೆ, ಜೂ. 16- ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಿಂದ ಯುವ ಸಬಲೀಕರಣ ವಿಚಾರ ಸಂಕಿರಣವನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಅಥವಾ ಮಾಧ್ಯಮಗಳನ್ನು ಬಳಸುವಾಗ ಬಹಳ ಎಚ್ಚರಿಕೆಯಿಂದ ಜಾಗರೂಕತೆಯಿಂದ ಇರಬೇಕೆಂದು ಕಿವಿಮಾತು ಹೇಳಿದರು. ಯಾವುದೇ ಅಹಿತಕರ ಘಟನೆಗಳಲ್ಲಿ ಪಾಲ್ಗೊಳ್ಳದೇ ನಿಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಮತ್ತೋರ್ವ ಅತಿಥಿಯಾಗಿದ್ದ ಡಾ. ಸುಭಾಷ್ ಚಂದ್ರನ್ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಜಾಗರೂಕ ನಾಗರಿಕ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರ ಸಂಕೀರಣವನ್ನು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ.ಬಿ. ಸಂಜಯ್ ಪಾಂಡೆ ಎಲ್ಲಾ ವಿದ್ಯಾರ್ಥಿಗಳಿಗೂ ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ.ಯು.ಎಂ. ನೇತ್ರಾವತಿ ಎಲ್ಲಾ ಅತಿಥಿಗಳಿಗೂ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕ ಪ್ರೊ. ಟಿ.ಆರ್. ತೇಜಸ್ವಿ ಕಟ್ಟಿಮನಿ, ಕಾರ್ಯಕ್ರಮದ ಸಂಯೋಜಕರುಗಳಾದ ಪ್ರೊ. ಎ.ಬಿ. ಯಶಸ್ವಿನಿ ಪಟೇಲ್ ಮತ್ತು ಪ್ರೊ. ಜಿ.ಆರ್. ಕಾವ್ಯ ಮತ್ತು ಇತರರು ಪಾಲ್ಗೊಂಡಿದ್ದರು.