ಬೆಂಗಳೂರು, ಜು.19- ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದಿರುವ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ.ಎಸ್.ಗಾಯತ್ರಿ ಸಿದ್ದೇಶ್ವರ ಅವರು ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ದಾಖಲಿಸಿದ್ದಾರೆ.
‘ಪ್ರಭಾ ಅವರು, ಮತದಾರರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸುವ ಮೂಲಕ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ಕೊಡುವ ಭರವಸೆ ನೀಡಿದ್ದಾರೆ. ಇದು ಪ್ರಜಾ ಪ್ರತಿನಿಧಿ ಕಾಯ್ದೆ–1951ರ ಕಲಂ 123(1), 123(2), 123(4) ಮತ್ತು 123(6)ಕ್ಕೆ ವಿರುದ್ಧವಾಗಿದೆ. ಮತದಾರರಿಗೆ ಲಂಚದ ಆಮಿಷ ಒಡ್ಡಿರುವ ಮತ್ತು ಚುನಾವಣಾ ಅಕ್ರಮ ಗಳನ್ನು ನಡೆಸಿರುವ ಇವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಹಾಸನದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ವಕೀಲ ಜಿ.ದೇವರಾಜೇಗೌಡ ಪುತ್ರ ಡಿ.ಚರಣ್ ಗೌಡ ಸಹ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ‘ಶ್ರೇಯಸ್ ಪಟೇಲ್ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಚುನಾವಣಾ ವೆಚ್ಚದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹಾಗಾಗಿ, ಅವರ ಆಯ್ಕೆ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.
ಗುರುವಾರವಷ್ಟೇ ಸಲ್ಲಿಸಲಾಗಿರುವ ಈ ಎರಡೂ ಅರ್ಜಿಗಳು ದಸ್ತಾವೇಜು ಕಚೇರಿಯಲ್ಲಿ ಪರಿಶೀಲನೆಗೆ ಒಳಗಾದ ನಂತರ ವಿಚಾರಣೆಗೆ ನಿಗದಿಯಾಬೇಕಿದೆ.