ಹರಪನಹಳ್ಳಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಎಚ್ಚರಿಕೆ
ಹರಪನಹಳ್ಳಿ, ಆ.4- ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊ ಳಿಸಲು ಬಿಜೆಪಿ-ಜೆಡಿಎಸ್ ಹುನ್ನಾರ ನಡೆಸಿವೆ, ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗುತ್ತದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಎಚ್ಚರಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಸೈಟು ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರವಿಲ್ಲದಿದ್ದರೂ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ ರೂಪಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಗೋಣಿಬಸಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಜೀವನದಲ್ಲಿ ಒಂದು ಕಪ್ಪು-ಚುಕ್ಕೆ ಇಲ್ಲದೇ ಪಾರದರ್ಶಕವಾಗಿ ಆಡಳಿತ ನಡೆಸಿಕೊಂಡು ಬಂದಿದ್ದಾರೆ. ಇವರ ಮೇಲೆ ಕೇಳಿ ಬಂದಿರುವ ಆರೋಪ ಸತ್ಯಕ್ಕೆ ದೂರವಾಗಿದೆ, ಇವರನ್ನು ಕೆಳಗಿಳಿಸುವ ಪ್ರಯತ್ನಕ್ಕೆ ಕೈ ಹಾಕಿದರೆ ರಾಜ್ಯ ಹೊತ್ತಿ ಉರಿಯುತ್ತದೆ ಎಂದರು.
ಮುಖಂಡ ಟಿ. ವೆಂಕಟೇಶ್ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು. ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕುಬೇರಪ್ಪ ಮಾತನಾಡಿ, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮುಂದಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪುರಸಭಾ ಸದಸ್ಯ ಅಬ್ದುಲ್ ರೆಹಮಾನ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಲಾಢ್ಯವಾಗಿದೆ. ಇದನ್ನು ಕೆಡವಲು ಸಾಧ್ಯವಿಲ್ಲ ಎಂದರು.
ಈ ವೇಳೆ ಪುರಸಭೆ ಸದಸ್ಯರಾದ ಗೊಂಗಡಿ ನಾಗರಾಜ, ಉದ್ದಾರ ಗಣೇಶ, ಲಾಟಿ ದಾದಾ ಪೀರ್, ಚಿಕ್ಕೇರಿ ಬಸಪ್ಪ, ಮುಖಂಡರಾದ ಉಪ್ಪಾರ ಹನುಮಂತಪ್ಪ, ವಸಂತಪ್ಪ, ಜಾವೀದ್, ಹುಲಿ ಕಟ್ಟಿ, ಚಂದ್ರಪ್ಪ, ಮೈದೂರು ರಾಮಣ್ಣ, ನೀಲ ಗುಂದ ವಾಗೀಶ, ಟಿ.ಎಚ್.ಎಂ.ಮಂಜುನಾಥ್, ಓ.ಮಹಾಂತೇಶ, ಬಸವರಾಜ ಹುಲಿಯಪ್ಪ ನವರ್, ಅರವಿಂದ, ಮುಜುಬರ್, ಶಶಿಕುಮಾರ, ವೀರೇಶ, ದೇವೇಂದ್ರಗೌಡ, ಅಂಜಿನಪ್ಪ, ಶಿವರಾಜ ಸೇರಿದಂತೆ ಇತರರು ಇದ್ದರು.