ರಾಜ್ಯಪಾಲರ ವಿರುದ್ಧದ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ರಾಜ್ಯಪಾಲರ ವಿರುದ್ಧದ ಅವಹೇಳನಕಾರಿ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ದಾವಣಗೆರೆ, ಆ. 22- ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಿರುದ್ಧ ಮಾಡುತ್ತಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾ ಕಚೇರಿಯಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿರುವ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಲಾಯಿತು.

ರಾಜ್ಯಪಾಲರ ಸಾಂವಿಧಾನಿಕ ಹುದ್ದೆಗೆ ಅಗೌರವ ತೋರುತ್ತಿರುವ  ಕಾಂಗ್ರೆಸ್ ಮುಖಂಡರು, ಸಚಿವರು, ಶಾಸಕರು ಹಾಗೂ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು. 

ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರಿಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜಾ ಹಾಗೂ ಸಚಿವ ಜಮೀರ್ ಅಹಮದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರು ಆಧರಿಸಿ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಮಾಡಲು ಅವಕಾಶವಿದೆ. ಇದನ್ನು ಬಿಟ್ಟು ರಾಜ್ಯಪಾಲರನ್ನು ಅವಹೇಳನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ನಿಮಗೆ ಧೈರ್ಯವಿದ್ದರೆ ರಾಜಭವನಕ್ಕೆ ನುಗ್ಗಿ ಎಂದು ಸವಾಲೆಸೆದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ನಡೆಸಲಾಗಿದೆ. ಈ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲಾಗಿದೆ. ಈ ಪ್ರಕರಣದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕಿತ್ತು. 

ಸಿದ್ದರಾಮಯ್ಯ ಅವರಿಗೆ ಅಧಿಕಾರದ ವ್ಯಾಮೋಹ ಹೆಚ್ಚಾಗಿದೆ. ಐವಾನ್ ಡಿಸೋಜ ಹಾಗೂ ಜಮೀರ್ ಅಹಮದ್ ಅವರ ವರ್ತನೆ ಭಯೋತ್ಪಾದಕರ ರೀತಿಯಲ್ಲಿದೆ. ಇವರ ವಿರುದ್ಧ ಭಯೋತ್ಪಾದಕ ನಿಗ್ರಹ ದಳಕ್ಕೆ ದೂರು ಕೊಡಲು ನಿರ್ಧರಿಸಿದ್ದೇನೆ ಎಂದರು.

ಪ್ರತಿಭಟನೆಯಲ್ಲಿ ಡಾ.ಎ.ಹೆಚ್. ಶಿವಯೋಗಿಸ್ವಾಮಿ, ವೀರೇಶ್ ಹನಗವಾಡಿ, ಯಶವಂತರಾವ್ ಜಾಧವ್, ಶ್ರೀನಿವಾಸ
ದಾಸಕರಿಯಪ್ಪ, ರಾಜನಹಳ್ಳಿ ಶಿವಕುಮಾರ್, ಮಾಡಾಳು ಮಲ್ಲಿಕಾರ್ಜುನ್, ಬಿ.ಜಿ. ಅಜಯ್ ಕುಮಾರ್, ಕೆ. ಪ್ರಸನ್ನಕುಮಾರ್, ಜಗದೀಶ್, ಬಿ.ಎಂ. ಸತೀಶ್ ಕೊಳೇನಹಳ್ಳಿ, ಧನಂಜಯ ಕಡ್ಲೇಬಾಳು, ಹನುಮಂತನಾಯ್ಕ,
ಶಿವನಗೌಡ ಪಾಟೀಲ್, ವೀಣಾ ನಂಜಪ್ಪ, ರುದ್ರೇಶ್, ನಸೀರ್ ಅಹಮದ್, ಮಂಜುನಾಥ,  ಗಂಗಾಧರ್, ಕೊಟ್ರೇಶ್, ಅನಿಲ್ ಕುಮಾರ್ ನಾಯ್ಕ ಮತ್ತಿತರರು ಭಾಗವಹಿಸಿದ್ದರು.

error: Content is protected !!