ಸಿಎಂಗೆ ಶ್ರೀಗಳ ಬೆಂಬಲ

ಸಿಎಂಗೆ ಶ್ರೀಗಳ ಬೆಂಬಲ

ನೈತಿಕ ಬೆಂಬಲ ಘೋಷಿಸಿದ  ದಲಿತ, ಹಿಂದುಳಿದ ವರ್ಗಗಳ ಸ್ವಾಮೀಜಿಗಳು

ಬೆಂಗಳೂರು, ಆ. 25 – ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ,  ಬೇಷರತ್ ನೈತಿಕ ಬೆಂಬಲ ಘೋಷಿಸಿದೆ.

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ, ಅವರು ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿರುವ ಸ್ವಾಮೀಜಿಗಳು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಷಡ್ಯಂತ್ರದ ವಿರುದ್ಧ ಒಕ್ಕೊರಲಿನಿಂದ ಸಿದ್ದರಾಮಯ್ಯ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ನಿಯೋಗದಲ್ಲಿ ಕಾಗಿನೆಲೆ ಕನಕಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ  ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ ಗುರುಪೀಠದ ಶ್ರೀ  ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಮಧುರೆ ಭಗೀರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ  ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿ, ಶಿವಮೊಗ್ಗದ ನಾರಾಯಣ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗದ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ತಂಗಡಗಿಯ ಹಡಪದ ಅಪ್ಪಣ್ಣ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ವಿಜಯನಗರದ ಸರೂರಿನ ಶ್ರೀ ಶಾಂತಮ್ಮಯ್ಯ ಸ್ವಾಮೀಜಿ ಮತ್ತಿತರರಿದ್ದರು.

error: Content is protected !!