ದಾವಣಗೆರೆ, ಸೆ. 8- ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ತೀರ್ಪಿನ ಅನ್ವಯ ಪರಿಶಿಷ್ಟರ ಮೀಸಲಾತಿ ಯಲ್ಲಿ ಒಳಮೀಸಲಾತಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ನಾಳೆ ದಿನಾಂಕ 9 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಜಿಲ್ಲಾಧ್ಯಕ್ಷ ಕುಂದುವಾಡ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಳೆ ಬೆಳಿಗ್ಗೆ 11 ಕ್ಕೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.
ಪರಿಶಿಷ್ಟ ಜಾತಿಗಳ ಮೀಸಲಾತಿಯು 101 ಪರಿಶಿಷ್ಟ ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ. ಆದ್ದರಿಂದ ಪರಿಶಿಷ್ಟರ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕಗಳಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ ಎಂದರು.
ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಿಸಿ ಒಳಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ 2004 ರಲ್ಲಿ ಎ.ಜೆ. ಸದಾಶಿವ ಆಯೋಗ ರಚಿಸಿತು. ಆಯೋಗ ಸರ್ಕಾರಕ್ಕೆ ದಿನಾಂಕ 14-6-2012 ರಂದು ವರದಿ ಸಲ್ಲಿಸಿತು. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು.ಈಗಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಹ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಅನುಮೋದಿಸಿ ದಿನಾಂಕ 17-3-2024 ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು ಎಂದು ಮಾಹಿತಿ ನೀಡಿದರು.
ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕಾಗಿ ವಿವಿಧ ರಾಜ್ಯಗಳ ಆಯೋಗದ ವರದಿಗಳು ಮತ್ತು ಕೋರ್ಟ್‌ಗಳ ಹಲವು ತೀರ್ಪುಗಳನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ನ ಏಳು ನ್ಯಾಯಾಧಿಶರ ಸಂವಿಧಾನ ಪೀಠ ಐತಿಹಾಸಿಕ ತೀರ್ಪು ನೀಡಿತ್ತು. ಈ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವ ಸಂವಿಧಾನಬದ್ಧ ಅಧಿಕಾರ ರಾಜ್ಯ ಸರ್ಕಾರಗಳಿಗಿದೆ ಎಂದು ತೀರ್ಪು ನೀಡಿದೆ. ಆದ್ದರಿಂದ ಸುಪ್ರಿಂ ಕೋರ್ಟ್‌ನ ಏಳು ನ್ಯಾಯಾಧೀಶರ ತೀರ್ಪಿನಂತೆ ಪರಿಶಿಷ್ಟರ ಮೀಸಲಾತಿಯಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಹೆಚ್.ಕೆ. ಕೊಟ್ರೇಶ್, ಹರೀಶ್, ಅಜ್ಜಂಪುರ ಹೆಚ್. ಅಣ್ಣಪ್ಪ ಸ್ವಾಮಿ, ಕೊಟ್ರೇಶ್ ಉಪಸ್ಥಿತರಿದ್ದರು.