ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಎಸ್ಸೆಸ್ಸೆಂ

ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಎಸ್ಸೆಸ್ಸೆಂ

ಎಫ್‌ಐಆರ್‌ನಿಂದ ಏನೂ ಆಗದು: ಎಸ್ಸೆಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಡಿನ ಜನತೆಗೆ ಒಳಿತಾಗುವ ಕಾರ್ಯಗಳನ್ನು ಮಾಡುತ್ತಿದ್ದು, ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾದರೂ ಏನೂ ಆಗುವುದಿಲ್ಲ ಎಂದು ಶಾಸಕ ಡಾ.  ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆ, ಸೆ. 27- ಬಿಜೆಪಿ, ಜೆಡಿಎಸ್ ಪಕ್ಷದವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು  ಮುಡಾ ಹಗರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ತಪ್ಪು ಮಾಡದ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.

ನಗರದಲ್ಲಿ ನಡೆದ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಲೋಕಾ ಯುಕ್ತ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಿ. ನಾವೂ ಸಹ ಕಾನೂನು ಹೋರಾಟಕ್ಕೆ ಸಜ್ಜಾಗುತ್ತೇವೆ. ಕಾಂಗ್ರೆಸ್ ಪಕ್ಷದ 136 ಶಾಸಕರು ಕೂಡ ಸಿಎಂ ಬೆನ್ನಿಗೆ ನಿಂತಿದ್ದೇವೆ. ವಿಪಕ್ಷದವರು ರಾಜೀನಾಮೆ ಕೇಳುತ್ತಾರೆ. ಆದರೆ ಕೊಡುವುದು ಬೇಡ ಎಂದು ನಾವು ಹೇಳುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನೀಡಿದ್ದಾರೆ. ಬಡವರಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ನಮಗೆ ಆರ್ಥಿಕ ಸಮೃದ್ಧಿ ಬೇಕು. ಆದರೆ ವಿಪಕ್ಷದವರಿಗೆ ಇವ್ಯಾವು ಬೇಕಾಗಿಲ್ಲ ಎಂದು ಕಿಡಿಕಾರಿದರು.

ದಾವಣಗೆರೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಎಸ್ಸೆಸ್ಸೆಂ ಹೇಳಿದರು.

ನೂತನವಾಗಿ ಆಯ್ಕೆಯಾಗಿರುವ ಕೆ. ಚಮನ್ ಸಾಬ್ ಅವರು ಸರ್ವ ಜನಾಂಗದವರನ್ನು ಒಟ್ಟಾಗಿ ಕರೆದೊಯ್ಯುವ ಬುದ್ದಿವಂತಿಕೆ ಅವರಲ್ಲಿದೆ. ಅವರು ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆಂಬ ವಿಶ್ವಾಸ ನಮ್ಮದು ಎಂದರು.

ಬಿಜೆಪಿಯವರ ಆಡಳಿತದಲ್ಲಿ ಕಳಪೆ ಕಾಮಗಾರಿಗಳು ಆಗಿದ್ದವು. ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದ ಸದ್ಬಳಕೆ ಆಗಿರಲಿಲ್ಲ. ನಮ್ಮ ಅವಧಿಯಲ್ಲಿ ಯಾವುದೇ ಕಳಪೆ ಕಾಮಗಾರಿಗಳು ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಹಸಿರು ದಾವಣಗೆರೆ ನಿರ್ಮಾಣದ ಹಿನ್ನೆಲೆಯಲ್ಲಿ ಎರಡು ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ವಿಷನ್ ದಾವಣಗೆರೆ ನಿರ್ಮಾಣ ಸೇರಿದಂತೆ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ನಾಗರಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

error: Content is protected !!