ಬಿಜೆಪಿಗೆ ಮುಜುಗರವಾಗಲಿ ಎಂಬ ಕಾರಣಕ್ಕಾಗಿಯೇ, ಮುಖ್ಯಮಂತ್ರಿ ಸ್ಥಾನಕ್ಕಾಗಿ 1 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂಬ ಆರೋಪ ಮಾಡುತ್ತಿದ್ದಾರೆ.
– ಎಂ.ಪಿ. ರೇಣುಕಾಚಾರ್ಯ
ದಾವಣಗೆರೆ, ಅ. 1 – ಮುಡಾ ವಿಷಯದಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಇಂತಹ ಸಂದರ್ಭದಲ್ಲಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಕೂಲವಾಗುವಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿಯ ಒಂದು ಬಣದ ಮುಖಂಡರು ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮುಡಾ ವಿಷಯದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದೇವೆ. ಯತ್ನಾಳ್ ವಿರುದ್ಧ ಸರಿಯಾದ ನಿರ್ಧಾರ ತೆಗೆದುಕೊಂಡು, ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಒತ್ತಾಯಿಸಿದ್ದೇವೆ ಎಂದರು.
ಪಂಚಮಸಾಲಿ ಸಮುದಾಯದ ಮೀಸಲಾತಿ ಪರ ಯತ್ನಾಳ್ ದೊಡ್ಡ ಮಾತುಗಳನ್ನು ಆಡುತ್ತಾರೆ. ಆದರೆ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೈ ತಪ್ಪಲು ಅವರೇ ಕಾರಣ ಎಂದು ಪರೋಕ್ಷವಾಗಿ ಆರೋಪಿಸಿದರು.
ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ಸಾವಿರ ಕೋಟಿ ರೂ. ಎಂದು ಯತ್ನಾಳ್ ಮಾತನಾಡುತ್ತಿದ್ದಾರೆ. ಅವರು ಶಾಸಕ ಸ್ಥಾನ ಗೆಲ್ಲಲು ಎಷ್ಟು ಖರ್ಚು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಆಗ್ರಹಿಸಿದರು.
ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಲೂಟಿಯಿಂದ ಜನ ಭ್ರಮನಿರಸನರಾಗಿದ್ದಾರೆ. ವಿಜಯೇಂದ್ರ ನೇತೃತ್ವದ ಹೋರಾಟದ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನಿವೇಶನಗಳನ್ನು ವಾಪಸ್ ಕೊಡುವ ಪರಿಸ್ಥಿತಿ ಬಂದಿದೆ ಎಂದರು.
ಇಂತಹ ಸಂದರ್ಭದಲ್ಲಿ ನಮ್ಮ ಮನೆಯನ್ನು ನಾವೇ ಒಡೆದುಕೊಳ್ಳುವ ಮಾತು ಬೇಡ. ಪಕ್ಷದಲ್ಲಿನ ಗೊಂದಲಕ್ಕೆ ವರಿಷ್ಠರು ಇತಿಶ್ರೀ ಹಾಡಬೇಕು. ಸಂಬಂಧಪಟ್ಟವರನ್ನು ಕರೆದು ವಿಷಯ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ವಿಜಯೇಂದ್ರ ವಿರೋಧಿಸುವುದು ಎಂದರೆ ಪಕ್ಷದ ವರಿಷ್ಠರನ್ನೇ ವಿರೋಧಿಸಿದಂತೆ ಎಂದರು.
ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ, ಯತ್ನಾಳ್ ಅವರು ಸಿದ್ದರಾಮಯ್ಯ ಬೆಂಬಲಿ ಸುವ ಉದ್ದೇಶದಿಂದ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಮನಸ್ಸಿಗೆ ತೋಚಿದಂತೆ ಆರೋಪಿಸುತ್ತಿದ್ದಾರೆ. ಯಾರದೋ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದರು.
ಸಾವಿರ ಕೋಟಿ ರೂ.ಗಳ ಆರೋಪ ಮಾಡುತ್ತಿರುವುದು ಭಂಡತನದ ಪರಮಾವಧಿ. ಈ ಬಾಯಿಬಡಕುತನದ ವಿರುದ್ಧ ಜನ ದಂಗೆ ಏಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಲೋಕಿಕೆರೆ ನಾಗರಾಜ್, ಬಿ.ಜಿ. ಅಜಯ್ ಕುಮಾರ್, ಚಂದ್ರಶೇಖರ್ ಪೂಜಾರ್, ಸುರೇಶ್ ಗಂಡಗಾಳೆ ಮತ್ತಿತರರು ಉಪಸ್ಥಿತರಿದ್ದರು.