ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗ: ಸಭೆ ನಡೆಸಿದ ಸಚಿವ ಸೋಮಣ್ಣ
ಕನ್ನಡದಲ್ಲೇ ರೈಲ್ವೆ ಇಲಾಖೆಯ ಪರೀಕ್ಷೆ
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ನೌಕರರಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಇಲಾಖೆಯಲ್ಲಿ 46 ಸಾವಿರ ಹುದ್ದೆಗಳು ಖಾಲಿಯಿದ್ದು, 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಸಚಿವ ಸೋಮಣ್ಣ ಹೇಳಿದರು.
ದಾವಣಗೆರೆ,ಅ.2- ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಹಾಗೂ ತುಮಕೂರು-ರಾಯದುರ್ಗ ರೈಲು ಮಾರ್ಗ ಯೋಜನೆಯ ಕಾಮಗಾರಿಯನ್ನು 2027 ರ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ, ಕಂದಾಯ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮಂದಗತಿಯಲ್ಲಿ ಸಾಗುತ್ತಿದ್ದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಕಾಮಗಾರಿ ಪ್ರಗತಿಯ ವೇಗವನ್ನು ಕಳೆದ ಎರಡೂವರೆ ತಿಂಗಳಲ್ಲಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಹಾಗೂ ತುಮಕೂರು- ರಾಯದುರ್ಗ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದ್ದು, ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ಮಾಡಲಾಗುತ್ತದೆ. ವರ್ಷದ ಅಂತ್ಯಕ್ಕೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು. ಈ ಯೋಜನೆಗೆ ಒಟ್ಟು 2406.73 ಎಕರೆ ಭೂಮಿ ಬೇಕಾಗಿದ್ದು, ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಹಾದು ಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣವಾಗಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂ ದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದರು.
ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ : ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ 23.09 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದು ಹೇಳಿದರು.
ರೈಲ್ವೆ ವೇಗ ಹೆಚ್ಚಿಸಲು ಕ್ರಮ : ರೈಲ್ವೆ ಇಂಜಿನ್‍ಗಳು ಬಹುತೇಕ ಶೇ. 98 ರಷ್ಟು ವಿದ್ಯುತ್ ಚಾಲಿತವಾಗಿದ್ದು, ಶೇ.2 ರಷ್ಟು ಮಾತ್ರ ಡೀಸೆಲ್ ಇಂಜಿನ್‍ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ ಇದ್ದು, ಇದನ್ನು 135 ಕಿ.ಮೀ ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಂದೇ ಭಾರತ್ ರೈಲು ಬಡವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು, ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕೆಂದರು.
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸಭೆಯಲ್ಲಿ ಮಾತನಾಡಿ, ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ ಎಂದು ಹೇಳಿದರು.
ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು, ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು, ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ಸಚಿವರಲ್ಲಿ ಮನವಿ ಮಾಡಿದರು.
ಹರಿಹರ ಶಾಸಕರಾದ ಬಿ.ಪಿ.ಹರೀಶ್, ಹೊಸಪೇಟೆಗೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದ್ದು, ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆಯಾಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಇದೆ ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಸೇರಿದಂತೆ ರೈಲ್ವೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.