ಬೆಂಗಳೂರು, ಅ.22- ಜಾತಿ ಗಣತಿಗೆ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಇಂದಿಲ್ಲಿ ರಾಡಿಷನ್ ಬ್ಲೂ (ಏಟ್ರಿಯಾ) ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಡೆಸಿದ ಸಭೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಏರ್ಪಾ ಡಾಗಿದ್ದ ಈ ಸಭೆಯಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಹೆಚ್. ಕಾಂತರಾಜು ಅವರ ಅಧ್ಯಕ್ಷತೆಯ ಜಾತಿ ಗಣತಿ ವರದಿಯ ಸಾಧಕ – ಬಾಧಕ ಬಗ್ಗೆ ಸುದೀರ್ಘ ವಾಗಿ ಚರ್ಚಿಸಿದ ನಂತರ ಈ ಆಗ್ರಹ ಮಾಡ ಲಾಯಿತು. ವೀರಶೈವ ಲಿಂಗಾಯತರು ಜಾತಿ ಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ಸ್ಪಷ್ಟಪಡಿಸುತ್ತೇವೆ. ಆದರೆ, ಕಳೆದ 10 ವರ್ಷಗಳ ಹಿಂದೆ ನಡೆಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯು ಹಲವು ವೈರುದ್ಧ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಮಹಾಸಭಾವು ಸರ್ಕಾರವನ್ನು ಒತ್ತಾಯಿಸಿತು.
ರಾಜ್ಯ ಸರ್ಕಾರದ ಪರಿಗಣನೆಯಲ್ಲಿರುವ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸುಗಳು ಕಾಂತರಾಜು ಅಧ್ಯಕ್ಷತೆಯಲ್ಲಿ ನಡೆಸಿದ ಸಮೀಕ್ಷಾ ವರದಿಯಾಗಿದ್ದು, ಈ ವರದಿಯು ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾದುದ್ದರಿಂದ ಸ್ವೀಕಾರಕ್ಕೆ ಅರ್ಹವಲ್ಲವೆಂದು ಮಹಾಸಭೆಯು ಸ್ಪಷ್ಟವಾಗಿ ಅಭಿಪ್ರಾಯಿಸುತ್ತದೆ. ಈ ಹಿನ್ನೆಲೆಯಲ್ಲಿ ಈ ಕುರಿತಾದ ಯಾವುದೇ ಉದ್ದೇಶಿತ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಮಹಾಸಭೆಯು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿತು.
ರಾಜ್ಯ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಹಲವಾರು ಲಿಂಗಾಯತ ಉಪಪಂಗಡಗಳ ಹೆಸರಿನ ಜೊತೆಯಲ್ಲಿ `ಲಿಂಗಾಯತ’ ಪದವಿಲ್ಲದೇ ಕೇವಲ ಉಪಪಂಗಡಗಳ ಹೆಸರನ್ನು ಮಾತ್ರ ನಮೂದಿಸಲಾಗಿರುತ್ತದೆ. ಆದುದರಿಂದ ಉಚ್ಚ ಹಾಗೂ ಸರ್ವೋಚ್ಚ ನ್ಯಾಯಾಲಯ ಸಿವಿಲ್ ಅಪೀಲ್ ನಂ. 7241/2021 ಪ್ರಕರಣದಲ್ಲಿ ನೀಡಿರುವ ತೀರ್ಪನ್ನು ಆಧಾರವಾಗಿರಿಸಿಕೊಂಡು, ಎಲ್ಲಾ ಲಿಂಗಾಯತ ಉಪಪಂಗಡಗಳ ಜೊತೆಯಲ್ಲಿ `ಲಿಂಗಾಯತ’ ಎಂದು ನಮೂದಿಸಿದ ಆಯ್ಕೆಯನ್ನು ಈಗಿರುವ ಪಟ್ಟಿಯಲ್ಲಿ, ಉಪಪಂಗಡಗಳಿರುವ ವರ್ಗಗಳನ್ನು ಬದಲಾಯಿಸದೇ ಸರ್ಕಾರದ ಆದೇಶಕ್ಕೆ ಸೂಕ್ತ ತಿದ್ದುಪಡಿ ತರಲು ರಾಜ್ಯ ಸರ್ಕಾರವನ್ನು ಮಹಾಸಭಾ ಕೇಳಿಕೊಂಡಿತು.
ವೀರಶೈವ-ಲಿಂಗಾಯತ ಎಲ್ಲಾ ಉಪಪಂಗಡಗಳನ್ನು ಕೇಂದ್ರ ಹಿಂದುಳಿದ ವರ್ಗಗಳ (ಓ.ಬಿ.ಸಿ) ಪಟ್ಟಿಯಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮಹಾಸಭೆಯು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.
ಸಾಮಾಜಿಕ ಅಸಮಾನತೆಯ ನಿರಾಕರಣೆ ಮತ್ತು ಸಾಮಾಜಿಕ ನ್ಯಾಯ ಕುರಿತಾದ ಸರ್ಕಾರದ ಎಲ್ಲಾ ಸೈದ್ಧಾಂತಿಕ, ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯ ಮುಂಚೂಣಿಯಲ್ಲಿ ನಿಂತು ಬೆಂಬಲಿಸುತ್ತದೆ ಎಂದು ಮಹಾಸಭಾವು ಸರ್ಕಾರಕ್ಕೆ ತಿಳಿಸಿತು.