ಸಮಗ್ರ ನೀರಾವರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ ಭರವಸೆ
ಜಗಳೂರು, ಜ.14- ತಾಲ್ಲೂಕಿನ ಸಮಗ್ರ ನೀರಾವರಿಗೆ ಆದ್ಯತೆ ನೀಡುವ ಮೂಲಕ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ಪೂರ್ಣ ಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಜಗಳೂರು ಜಲೋತ್ಸವ ಹಾಗೂ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಿರಿಗೆರೆ ಶ್ರೀಗಳ ಸಂಕಲ್ಪದಂತೆ ಶಾಶ್ವತ ನೀರಾವರಿ ಯೋಜನೆಯಾದ 57 ಕೆರೆ ತುಂಬಿಸುವ ಯೋಜನೆ ಸಾಕಾರಕ್ಕೆ ಕೈಜೋಡಿಸಿದ ಪ್ರತಿಯೊಂದು ಸರ್ಕಾರಗಳಿಗೂ ಅಭಿನಂದನೆಗಳು. ನನ್ನ ಆಡಳಿತಾವಧಿಯಲ್ಲಿ ಕೆರೆಗಳು ಕೋಡಿ ಬಿದ್ದ ಜಲ ಸಂಭ್ರಮಕ್ಕಾಗಿ ಜಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಬರದ ನಾಡಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಗೆ ಬರವಿಲ್ಲ. ಕ್ಷೇತ್ರದ ಜನತೆಯ ಭರವಸೆ ಹುಸಿಯಾಗದಂತೆ ಜಿಲ್ಲಾ ಸಾಹಿತ್ಯ ಸಮ್ಮೇಳನ ಹಾಗೂ ಜಲೋತ್ಸವ ಕಾರ್ಯ ಕ್ರಮ ಅದ್ಧೂರಿಯಾಗಿ ನಡೆದಿದೆ ಎಂದರು.
ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ ಮಾತನಾಡಿ, ಶಾಸಕ ಬಿ.ದೇವೇಂದ್ರಪ್ಪ ತಾಲ್ಲೂಕಿನ ಜನರ ಧ್ವನಿಯಾಗಿ ಮೊದಲ ಅಧಿವೇಶನದಲ್ಲಿ ಕೆರೆ ತುಂಬಿಸುವ ಯೋಜನೆಗೆ ಧ್ವನಿ ಎತ್ತಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಜಿ.ಪಂ ಮಾಜಿ ಸದಸ್ಯ ಕೆ.ಪಿ ಪಾಲಯ್ಯ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ 57 ಕೆರೆ ತುಂಬಿಸುವ ಯೋಜನೆಗೆ 650 ಕೋಟಿ ರೂ. ಅನುದಾನ ನೀಡುವ ಮೂಲಕ ಸಿರಿಗೆರೆ ಶ್ರೀಗಳಿಗೆ ಗೌರವ ಸಲ್ಲಿಸಿ ವಿಶ್ವಾಸ ಉಳಿಸಿಕೊಂಡಿದ್ದಾರೆ. ತಾಲೂಕಿನಲ್ಲಿ ನೀರಾವರಿ ಮೂಲಗಳಿಲ್ಲದೆ ಕೃಷಿ, ಉದ್ಯೋಗ, ಅಭಿವೃದ್ದಿಗೆ ಪೂರಕವಾಗಲಿದೆ ಎಂದರು.
ಸರಿಗಮಪ ಖ್ಯಾತ ಗಾಯಕರಾದ ಅರ್ಜುನ್ ಜನ್ಯ ಅವರ ತಂಡದ ರಸಮಂಜರಿ ಕಾರ್ಯಕ್ರಮ ಪ್ರೇಕ್ಷಕರ ಮನರಂಜಿಸಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸೈಯದ್ ಕಲೀಂಉಲ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಕೆಪಿಸಿಸಿ ಎಸ್.ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್, ಸಾಹಿತಿ ಎನ್.ಟಿ. ಎರ್ರಿಸ್ವಾಮಿ, ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಮಾರಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಲ್. ತಿಪ್ಪೇಸ್ವಾಮಿ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ಪಿ.ಎಸ್. ಸುರೇಶ್ ಗೌಡ್ರು, ಪಲ್ಲಾಗಟ್ಟೆ ಶೇಖರಪ್ಪ, ಬಿ. ಮಹೇಶ್ವರಪ್ಪ ಮುಂತಾದವರು ಇದ್ದರು.