ಕಾಂಗ್ರೆಸ್ ಕಾರ್ಯಕರ್ತೆಯರ ಸಭೆಯಲ್ಲಿ ಮಹಿಳಾ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಅಭಿಮತ
ದಾವಣಗೆರೆ, ಜ.22- ಸದಸ್ಯತ್ವ ನೋಂದಣಿಗೆ ತೆರಳಿದ ವೇಳೆ ಜನರಿಗೆ ಅಗತ್ಯವಿರುವ ಬೀದಿ ದೀಪ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಆಲಿಸಿ, ಅವುಗಳನ್ನು ಕಲ್ಪಿಸಿ ಕೊಡುವ ಪ್ರಯತ್ನ ಮಾಡುವುದರಿಂದ ಕಾರ್ಯಕರ್ತರ ಮೇಲಿನ ವಿಶ್ವಾಸ ಉಳಿಯುತ್ತದೆ ಮತ್ತು ನಾಯಕತ್ವ ಬೆಳೆಯುತ್ತದೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದರು.
ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದರು.
ಮಹಿಳೆಯರಿಗೆ ನ್ಯಾಯ ಕೊಡಿಸುವ ಮೂಲಕ ಅವರಿಗೆ ಧ್ವನಿಯಾಗಿ ನಿಲ್ಲಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ನಾಯಕತ್ವ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಭಾರತದಲ್ಲಿನ ಪುರುಷ ಪ್ರಧಾನ ವ್ಯವಸ್ಥೆಯಿಂದಾಗಿ ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನಗಳು ಮತ್ತು ಹಕ್ಕುಗಳು ಸಮರ್ಪಕವಾಗಿ ಸಿಕ್ಕಿಲ್ಲ. ಸಂವಿಧಾನದ ಆಶಯದಂತೆ ಮಹಿಳೆಯರಿಗೂ ಪುರುಷರ ಸರಿ ಸಮಾನವಾದ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಸಂವಿಧಾನ ಪೀಠಿಕೆಯನ್ನು ಕನಿಷ್ಠಪಕ್ಷ ವಾರಕ್ಕೊಮ್ಮೆಯಾದರೂ ಪಠಿಸಬೇಕೆಂದು ಸಲಹೆ ನೀಡಿದರು.
ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರು, ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ಹೆಚ್ಚು ದೌರ್ಜನ್ಯ ನಡೆಯುತ್ತವೆ. ಆದರೆ ಕಾಂಗ್ರೆಸ್ ಸರ್ಕಾರ ಜಾತಿ, ಮತ, ಧರ್ಮ, ಲಿಂಗ ಭೇದ ಮಾಡುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಅನುಷ್ಠಾನದ ಫಲವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಮಹಿಳೆಯರ ಕೈ ಬಲಪಡಿಸಿದಲ್ಲಿ ಇಡೀ ಕುಟುಂಬ ಆರ್ಥಿಕವಾಗಿ ಮೇಲೆ ಬರುತ್ತದೆ ಎಂಬ ಮುಂದಾಲೋಚನೆಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.
ಮಹಿಳಾ ಕಾಂಗ್ರೆಸ್ ಸದಸ್ಯತ್ವ ಹೆಚ್ಚಳ ಮಾಡುವುದರಿಂದ ಪಕ್ಷಕ್ಕೆ ಬಲ ಬರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿದವರಿಗೆ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಉನ್ನತ ಸ್ಥಾನಮಾನ ದೊರಕಲಿದೆ ಎಂದು ಹೇಳಿದರು.
ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಮಾತನಾಡಿ, ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಮಹಿಳೆಯರ ಸಹಕಾರ ಅತ್ಯಗತ್ಯ. ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ ಎಂದರು.
ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್‌ಸಾಬ್ ಮಾತನಾಡಿ, ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯ್ತಿ, ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ವಿಧಾನಸಭೆ, ಲೋಕಸಭೆಯಲ್ಲೂ ಸಹ ಈ ಮೀಸಲಾತಿ ಜಾರಿಗೆ ಬರಲಿದೆ. ನಿಷ್ಠೆ, ಪ್ರಾಮಾಣಿಕತೆಯಿಂದ ಪಕ್ಷಕ್ಕೆ ದುಡಿದರೆ ಅವಕಾಶಗಳು ತಾನಾಗಿಯೇ ಹುಡುಕಿಕೊಂಡು ಬರಲಿವೆ ಎಂದು ಹೇಳಿದರು.
ದೂಡ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮಾತನಾಡಿ, ಪಕ್ಷ ಸಂಘಟನೆ, ಹೋರಾಟಗಳಲ್ಲಿ ಮಹಿಳಾ ಕಾರ್ಯಕರ್ತೆಯರ ಭಾಗವಹಿಸುವಿಕೆ ಅತ್ಯಂತ ಸಕ್ರಿಯವಾಗಿದೆ. ವಾರ್ಡ್‌ವಾರು ಸಂಘಟನೆಯಲ್ಲಿ ತೊಡಗಿರುವ ಮಹಿಳಾ ಕಾರ್ಯಕರ್ತರಿಗೆ ಪ್ರೋತ್ಸಾಹದ ಅವಶ್ಯವಿದೆ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶರಾವ್ ಜಾಧವ್, ವಿವಿಧ ಹಂತದ ಪದಾಧಿಕಾರಿಗಳಾದ ಮಂಜುಳಾ, ಮಂಗಳಮ್ಮ, ಸುಧಾ, ಮೀನಾಕ್ಷಿ ಜಗದೀಶ್, ಶುಭ ಮಂಗಳಾ, ಸುಧಾ ಇಟ್ಟಿಗುಡಿ ಮಂಜುನಾಥ್, ಸವಿತಾ ಗಣೇಶ್ ಹುಲ್ಮನಿ, ಆಶಾ ಉಮಾಶಂಕರ್, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.