ಡಿಸೆಂಬರ್ ಹೊತ್ತಿಗೆ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ

ಡಿಸೆಂಬರ್ ಹೊತ್ತಿಗೆ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ

ದಾವಣಗೆರೆ, ಮಾ.2- ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಡಿಸೆಂಬರ್‌ ಹೊತ್ತಿಗೆ ರಾಜ್ಯದ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅನುಮಾನ ಇರುವವರಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಗಾದಿಯನ್ನು ಹೈಕಮಾಂಡ್‌ ನೀಡಲಿದೆ ಎಂಬ ಅಚಲ ನಂಬಿಕೆ ಇದೆ. ವರ್ಷಾಂತ್ಯಕ್ಕೆ ಮುಖ್ಯಮಂತ್ರಿಯಾದರೆ ಮುಂದಿನ ಅವಧಿಗೂ ಅವರೇ ಮುಂದುವರಿಯಲಿದ್ದಾರೆ. ಏಳೂವರೆ ವರ್ಷ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಲ್ಲಿ ಡಿಕೆಶಿ ಅವರ ಪಾತ್ರ ಪ್ರಮುಖವಾದದ್ದು. ಪಕ್ಷಕ್ಕಾಗಿ ಹಣ ಖರ್ಚು ಮಾಡಿದ್ದಾರೆ. ಅವರ ಮೌನವನ್ನು ದೌರ್ಬಲ್ಯ ಎಂದು ಭಾವಿಸಬೇಕಿಲ್ಲ. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಅವರು ಎಲ್ಲಿ ಇರುತ್ತಾರೊ ಅಲ್ಲಿ ನಾವೂ ಇರುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಆಗುವುದು ಖಚಿತವಾದ ಬಳಿಕ ಡಿ.ಕೆ.ಶಿವಕುಮಾರ್‌ ವಿರುದ್ಧ ಕೆಲವರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಚಿವ ಕೆ.ಎನ್‌.ರಾಜಣ್ಣ ಅವರ ಹೇಳಿಕೆಯಿಂದ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರವಾಗುತ್ತಿದೆ. ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಹೈಕಮಾಂಡ್‌ ಕೂಡಲೇ ಮಧ್ಯಪ್ರವೇಶ ಮಾಡಿ ರಾಜಣ್ಣ ಅವರ ಬಾಯಿ ಮುಚ್ಚಿಸಬೇಕು ಎಂದು ಆಗ್ರಹಿಸಿದರು.

error: Content is protected !!