ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

ರಾಜ್ಯ ಬಜೆಟ್‌ನಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ

ದಾವಣಗೆರೆ, ಮಾ.9- ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ಧತಿ ರದ್ದುಪಡಿಸಿ, ಪೌರ ಕಾರ್ಮಿಕರ ಮಾದರಿಯಲ್ಲಿ ನೇರಪಾವತಿ ಜಾರಿಗೊಳಿಸದೇ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆ ನಡೆಸಿತು.

ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆ ಪೂರ್ವ ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ 6ನೇ ಗ್ಯಾರಂಟಿ ನೀಡಿತ್ತು. 

ಆದರೆ ಪೌರಕಾರ್ಮಿಕರಲ್ಲಿ ತಾರತಮ್ಯ ಎಸಗಿರುವ ಸರ್ಕಾರವು ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಭರವಸೆಯನ್ನು ಹುಸಿಗೊಳಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಹೊರಗುತ್ತಿಗೆ ನೌಕರರ ಸಂಘದ ತೀವ್ರ ಹೋರಾಟದ ಪರಿಣಾಮ ಈ ಬಾರಿಯ ಬಜೆಟ್‌ನಲ್ಲಿ ನೇರ ಪಾವತಿ ಘೋಷಣೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಹಣಕಾಸು ಇಲಾಖೆ ಸೂಚನೆ ನೀಡಿತ್ತು. ಅದರಂತೆ ನಗರಾಭಿವೃದ್ಧಿ ಇಲಾಖೆ ಅಗತ್ಯ ಪ್ರಸ್ತಾವನೆ ಸಲ್ಲಿಸಿತ್ತು. ಗುತ್ತಿಗೆ ಏಜೆನ್ಸಿಗಳ ಲಾಭಿಗೆ ಶರಣಾಗಿರುವ ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರಿಗೆ ವಿಶ್ವಾಸ ದ್ರೋಹ ಎಸಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಎಚ್ಚೆತ್ತು ಗುತ್ತಿಗೆ ಪದ್ದತಿ ರದ್ದುಗೊಳಿಸಿ ನೇರಪಾವತಿ ಜಾರಿಗೊಳಿಸಬೇಕು. ತಪ್ಪಿದ್ದಲ್ಲಿ ರಾಜ್ಯಾದ್ಯಂತ ಕುಡಿಯುವ ನೀರು, ಸ್ವಚ್ಚತೆ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

error: Content is protected !!