ಹರಿಹರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಹರಿಹರ, ಏ.4 – ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಅನಿಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಶಾಸಕ ಎಸ್. ರಾಮಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶಿವಮೊಗ್ಗ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕಛೇರಿಯ ಮುಂಭಾಗ ಸೋಮವಾರ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಮಾತ ನಾಡಿದ ಶಾಸಕ ಎಸ್. ರಾಮಪ್ಪ, ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್‌ಗಳಿಗೆ ಹೂವಿನ ಹಾರ ಹಾಕುವ ಮೂಲಕ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಬಿಜೆಪಿ ಸರ್ಕಾರದ ದುಬಾರಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ನಿತ್ಯ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಸಿಲಿಂಡರ್ ಬೆಲೆ ಗಗನಕ್ಕೆ ಏರುತ್ತಿದ್ದು, ಬಡ ಜನತೆಯು ನಲುಗುವಂತಾಗಿದೆ. ಬಿಜೆಪಿ ಸರ್ಕಾರ ತೆರಿಗೆ ವಸೂಲಿ ಮಾಡು ತ್ತಿದೆಯೇ ಹೊರತು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ನಗರಸಭಾ ಸದಸ್ಯರಾದ ಶಂಕರ್ ಖಟಾವ್‌ಕರ್, ಎಂ.ಎಸ್ ಬಾಬುಲಾಲ್, ಮಾಜಿ ಸದಸ್ಯ ಬಿ.ರೇವಣಸಿದ್ದಪ್ಪ, ಹೆಂಚಿನ ನಾಗಣ್ಣ, ಮುಖಂಡರಾದ ದಾದಾಪೀರ್ ಭಾನುವಳ್ಳಿ, ಹನುಮಂತಪ್ಪ, ಎಂ.ಎಸ್. ಆನಂದ, ಹೆಚ್.ಶಿವಪ್ಪ, ಬಿ.ರಮೇಶ್, ಹನುಮಂತಪ್ಪ, ಕೆ.ಜಡಿಯಪ್ಪ, ಶಿವಾಜಿ, ಗೀತಾ ಕದರಮಂಡಲಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!