ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ, ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸ ಮಾಡುತ್ತೇನೆ

ಗಡಿಗುಡಾಳ್ ಮಂಜುನಾಥ್

ದಾವಣಗೆರೆ, ಮಾ. 7- ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ಆಡಳಿತ ಪಕ್ಷವನ್ನು ಎಚ್ಚರಿಸುವ ಕೆಲಸ‌ ಮಾಡುತ್ತೇನೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನೂತನ ನಾಯಕ ಗಡಿಗುಡಾಳ್ ಮಂಜುನಾಥ್ ತಿಳಿಸಿದ್ದಾರೆ. 

ಪಾಲಿಕೆಯ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಪೂಜೆ ಸಲ್ಲಿಸುವುದರ ಮೂಲಕ ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡ ಬಳಿಕ ಅವರು ಮಾತನಾಡಿದರು. 

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಸೇರಿದಂತೆ, ಜಿಲ್ಲೆಯ ಪಕ್ಷದ  ನಾಯಕರು ವಿಶ್ವಾಸವಿಟ್ಟು ತಮಗೆ ನೀಡಿರುವ ಪಾಲಿಕೆ ವಿಪಕ್ಷ ನಾಯಕ ಸ್ಥಾನವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಅವರು ಭರವಸೆ ನೀಡಿದರು. 

ಈಗ ಬೇಸಿಗೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಜಟಿಲವಾಗುತ್ತದೆ. ಈಗಿನಿಂದಲೇ ಜನರಿಗೆ ಸಮರ್ಪಕವಾಗಿ ನೀರು ಪೂರೈಸಲು ವಿಶೇಷ ಕಾಳಜಿ ವಹಿಸಬೇಕು. ಜೊತೆಗೆ ಸ್ಮಾರ್ಟ್ ಸಿಟಿಗೆ ನೂರಾರು ಕೋಟಿ ರೂಪಾಯಿ ಬಿಡುಗಡೆ ಆಗಿದೆ. ಅಲ್ಲಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಜನರಿಗೆ ಸಮಸ್ಯೆಯಾಗುತ್ತಿದೆ. ಆದಷ್ಟು ಬೇಗ ಅಗೆದಿರುವ ಗುಂಡಿಗಳನ್‌ನು ಮುಚ್ಚಿಸಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ನೀಡಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಹತ್ತು ಹಲವು ಸಮಸ್ಯೆಗಳಿದ್ದು, ಇದರ ವಿರುದ್ಧ ಮುಂಬರುವ ದಿನಗಳಲ್ಲಿ ಪ್ರಬಲವಾಗಿ ಧ್ವನಿ ಎತ್ತುತ್ತೇನೆ ಎಂದು ಹೇಳಿದ ಅವರು, ಇದಕ್ಕೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.

ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯ ಚಮನ್ ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಕಾಂಗ್ರೆಸ್ ಮುಖಂಡ ಎಸ್. ಮಲ್ಲಿಕಾರ್ಜುನ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!