ಬಿಜೆಪಿ ದಕ್ಷಿಣ ಯುವ ಮೋರ್ಚಾ ಪ್ರತಿಭಟನೆ

ದಾವಣಗೆರೆ, ಜ.1- ಉಜಿರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಎಸ್‍ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ದಕ್ಷಿಣ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮುಖೇನ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಉಜಿರೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ವೇಳೆ ಮತ ಎಣಿಕೆ ಕೇಂದ್ರದ ಎದುರು ಡಿ.30ರಂದು ನಡೆದ ವಿಜಯೋತ್ಸವದಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿ ದೇಶ ದ್ರೋಹದ ಕೃತ್ಯ ಎಸಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಇಂತಹ ದೇಶ ದ್ರೋಹಿಗಳಿಗೆ ಜೀವಾವಧಿ ಶಿಕ್ಷೆ ಅಥವಾ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯದ ಶಾಂತಿ, ಸುವ್ಯವಸ್ಥೆ ಕದಡಲು ಸಮಾಜಘಾತುಕ ಶಕ್ತಿಗಳು ಪ್ರಯತ್ನಿಸುತ್ತಿವೆ. ಈ ಘಟನೆಗೆ ಪ್ರತ್ಯಕ್ಷ ಮತ್ತು ಪರೋಕ್ಷ ಕಾರಣವಾಗಿರುವವರನ್ನು ತನಿಖೆಗೆ ಒಳಪಡಿಸಬೇಕು. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆಯ ಪದಾಧಿಕಾರಿಗಳೇ ನೇರ ರೂವಾರಿಗಳಾಗಿದ್ದು, ಮಂಗಳೂರಿನ ಕೋಮು ಗಲಭೆಯಲ್ಲೂ ನೇರ ಕಾರಣರಾಗಿದ್ದಾರೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸಲು ಕಾರಣವಾಗಿರುವ ಈ ಸಂಘಟನೆಯನ್ನು ನಿಷೇಧಿಸಿ, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ದಕ್ಷಿಣ ಕ್ಷೇತ್ರದ ಮುಖಂಡರಾದ ತರಕಾರಿ ಶಿವು, ಪ್ರವೀಣ್ ಜಾಧವ್, ಸೋಗಿ ಗುರುಶಾಂತ್, ರಾಜು ನೀಲಗುಂದ, ಗಣೇಶ್, ಅನಿಲ್, ಮಂಜು, ಮಾಲತೇಶ್, ಪ್ರದೀಪ್, ಸಂದೇಶ್, ಸಚಿನ್, ಅಭಿ, ನಂದೀಶ್, ಹರೀಶ್ ಶಾಮನೂರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

error: Content is protected !!