ಬೀದರ್, ಜ. 6 – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, ಎರಡು ವರ್ಷಗಳಲ್ಲಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಹಳೆಯ ಅನುಭವ ಮಂಟಪದ ಬಳಿಯೇ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ. ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂ.ಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಅವರು ಇವರು ಎನ್ನದೇ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಮಹತ್ವದ್ದಾಗಿದೆ. ಮನುಕುಲದ ಏಳಿಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ. ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ಮಾತನಾಡಿ, ಪ್ರಧಾನ ಮಂತ್ರಿಗಳು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದಂತೆ, ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಅನುಭವ ಮಂಟಪ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿಗಳು ಭೂಮಿ ಪೂಜೆ ನೆರವೇರಿಸಿದ್ದು ಕೂಡ ಒಂದು ಐತಿಹಾಸಿಕ ಪ್ರಯತ್ನ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಮಾತನಾಡಿ, ಈ ಶರಣ ಕಾಯಕ ಭೂಮಿಯಲ್ಲಿ 12ನೇ ಶತಮಾನದ ವೈಭವವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಅನುಭವ ಮಂಟಪ ನಿರ್ಮಾಣಕ್ಕೆ ಯಡಿಯೂರಪ್ಪನವರು ಚಾಲನೆ ನೀಡಿದ್ದು, ಬೀದರ್ ಮತ್ತು ರಾಜ್ಯದ ಐತಿಹಾಸಿದ ಪುಟಗಳಲ್ಲಿ ದಾಖಲಾಗುವಂತದ್ದಾಗಿದೆ ಎಂದಿದ್ದಾರೆ.