ನ್ಯಾಮತಿ, ಫೆ.11- ಸಂತ ಸೇವಾಲಾಲರ 282 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯುವ ಸೂರಗೊಂಡನಕೊಪ್ಪಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.
ವೇದಿಕೆ ಸೇರಿದಂತೆ ಕಾರ್ಯಕ್ರಮದ ರೂಪು ರೇಷೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಮೂರು ದಿನಗಳ ಜಯಂತ್ಯೋತ್ಸವಕ್ಕೆ ರಾಜ್ಯ, ಹೊರರಾಜ್ಯ ಗಳಿಂದ ಲಕ್ಷಾಂತರ ಭಕ್ತರು ಮಾಲಾಧಾರಿ ಗಳಾಗಿ ಬರಲಿದ್ದು, ಯಾವುದೇ ಲೋಪವಾಗ ದಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ ಸೇರಿದಂತೆ ಇತರೆ ಗಣ್ಯರು ಸಂತ ಸೇವಾಲಾಲರ ಜಯಂತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸೂರಗೊಂಡನಕೊಪ್ಪಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಪ್ರಸಾದಕ್ಕೆ ಕೌಂಟರ್ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದರು.
ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ ಮಾತನಾಡಿ, ಸಂತ ಸೇವಾಲಾಲರ ಜನ್ಮಭೂಮಿ ಸೂರಗೊಂಡನಕೊಪ್ಪದಲ್ಲಿ ಶಾಶ್ವತ ವೇದಿಕೆ ನಿರ್ಮಾಣವಾಗಿದ್ದು ಅನುಕೂಲವಾಗಿದೆ. ಬರುವ ಭಕ್ತರಿಗೆ ತೊಂದರೆಯಾಗದ ರೀತಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಒಂದು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಅವಶ್ಯಕತೆ ಬಿದ್ದರೆ ಮತ್ತೊಂದು ಹೆಲಿಪ್ಯಾಡ್ ನಿರ್ಮಾಣ ಮಾಡಲು ಜಿಲ್ಲಾಡಳಿತ ಸಿದ್ಧವಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಉಮಾ ರಮೇಶ್, ಸುರೇಂದ್ರ ನಾಯ್ಕ, ತಾಂಡಾಭಿವೃದ್ದಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯ ರವಿಕುಮಾರ್ ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸಂತಪ್ಪ, ಸಮಾಜ ಕಲ್ಯಾಣ ಇಲಾಖೆ ಡಿ.ಡಿ. ರೇಷ್ಮಾಬಾನು, ಬಂಜಾರ್ ಸಮಾಜದ ತಾಲ್ಲೂಕು ಅಧ್ಯಕ್ಷ ಜುಂಜಾನಾಯ್ಕ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.