ದಾವಣಗೆರೆ, ಜು.19- ಜಿಲ್ಲೆಯಲ್ಲಿ ಅಕ್ರಮ-ಸಕ್ರಮ ಯೋಜನೆಯಡಿ ಪಂಪ್ಸೆಟ್ಗಳಿಗೆ ವಿದ್ಯುತ್ ಪಡೆಯಲು ನೋಂದಣಿ ಮಾಡಿಸಿರುವ ರೈತರಿಗೆ ವಿದ್ಯುತ್ ಪೂರೈಕೆ ಮಾಡುವಂತೆ ಭದ್ರಾ ಮೇಲ್ದಂಡೆ ಯೋಜನೆಯ ತಜ್ಞರ ಸಮಿತಿ ಸದಸ್ಯ ಕೆ.ಬಿ. ಕಲ್ಲೇರುದ್ರೇಶ್ ಒತ್ತಾಯಿಸಿದ್ದಾರೆ.
ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಬೇರೆ ಬೇರೆ ಕೆಲಸಗಳಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ ಎಂದು ಲೇವಡಿ ಮಾಡಿದ ಅವರು, ಇಚ್ಛಾಶಕ್ತಿಯುಳ್ಳ ರಾಜಕೀಯ ಕಾರ್ಯಕರ್ತರು ಆಯಾ ಪಕ್ಷಗಳ ಮುಖಂಡರುಗಳ ಗಮನಕ್ಕೆ ಈ ವಿಷಯ ತಂದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಬೇಕು ಎಂದವರು ಹೇಳಿದರು.
ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಪಂಪ್ಸೆಟ್ಗೆ 20 ಸಾವಿರ ರೂ.ಗಳಿಗೂ ಹೆಚ್ಚು ಹಣ ಪಾವತಿ ಮಾಡಿದ್ದಾರೆ. 30 ಸಾವಿರಕ್ಕೂ ಹೆಚ್ಚು ರೈತರು ಪಂಪ್ಸೆಟ್ಗಳಿಗೆ ವಿದ್ಯುತ್ ನೀಡುವಂತೆ ನೋಂದಣಿ ಮಾಡಿಸಿದ್ದಾರೆ. ಆದರೆ ಇದುವರೆಗೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಹಾಲೇಕಲ್ಲು ಮದನಕುಮಾರ್, ಚದರಗೊಳ್ಳದ ಸಂತೋಷ್, ಮರಿಕುಂಟೆ ಕಲ್ಲೇಶ್ ಹಾಗು ಇತರರಿದ್ದರು.