ದಾವಣಗೆರೆ, ಮಾ.22- ಜೈನ ಸಮಾಜದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣ ಮಾಡಲು ಹಾಗೂ ಸಮಾಜದ ಸಾಧು-ಸಂತರ ಕಾಲ್ನಡಿಗೆ ವೇಳೆ ಅಗತ್ಯವಾದ ವಿಶ್ರಾಂತಿ ಗೃಹಗಳನ್ನು ನಿರ್ಮಿಸಿಕೊಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದು, ಸರ್ಕಾರಕ್ಕೆ ಅಭಿನಂದಿಸುವುದಾಗಿ ಶ್ರೀ ಸುಪಾರ್ಶ್ವನಾಥ್ ಜೈನ ಶ್ವೇತಾಂಬರ ಮೂರ್ತಿ ಪೂಜಕ್ ಸಂಘದ ಅಧ್ಯಕ್ಷ ಮಹೇಂದ್ರಕುಮಾರ್ ಪಿ.ಜೈನ್ ಹೇಳಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕ ಗೌತಮ್ ಜೈನ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೈನ ಸಮಾಜದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದರು. ಇವರ ಮನವಿಯನ್ನು ಸರ್ಕಾರ ಪುರಸ್ಕರಿಸಿದೆ ಎಂದರು.
ಮೊದಲ ಹಂತದಲ್ಲಿ ಹತ್ತು ಹಾಗೂ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ ಜೈನ ಸಾಧು ಸಂತರ ವಿಶ್ರಾಂತಿ ಗೃಹ ನಿರ್ಮಾಣಕ್ಕೆ ಸಮಾಜ ಸೂಕ್ತ ಜಾಗ ನೀಡಿದರೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಧನ ಸಹಾಯ ಮಾಡುವ ಭರವಸೆಯನ್ನೂ ನೀಡಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಕುಮಾರ್ ಜೈನ್, ಸುರೇಶ್ ಜೈನ್, ಗೌತಮ್ ಜೈನ್ ಉಪಸ್ಥಿತರಿದ್ದರು.