ಜಗಳೂರಿನ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಪಂಡಿತ್
ಜಗಳೂರು, ಆ.6- ಜನ ಜಾಗೃತಿಗಾಗಿ `ಊರಿಗಾಗಿ ಒಂದು ಗಂಟೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ವೃತ್ತ ನಿರೀಕ್ಷಕ ಮಂಜುನಾಥ್ ಪಂಡಿತ್ ತಿಳಿಸಿದರು.
ಪಟ್ಟಣದ ಹಳೇ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು, ಕೋವಿಡ್ ಮೂರನೇ ಅಲೆ ಕುರಿತು ಮುಂಜಾಗ್ರತೆಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದರು.
ಕೊರೊನಾ ಮೂರನೇ ಅಲೆ ಬಗ್ಗೆ ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸಲು ಮುಖಕ್ಕೆ ಮಾಸ್ಕ್ ಹಾಕಬೇಕು ಬೇಕೆಂದು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳಿಂದ ಪ್ರಾಯೋ ಗಿಕವಾಗಿ ಒಂದು ವಾರದವರೆಗೆ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಆರಕ್ಷಕ ಉಪ ನಿರೀಕ್ಷಕ ಸಂತೋಷ್ ಬಾಗೋಜಿ ಮಾತನಾಡಿ, ಪೊಲೀಸ್ ಇಲಾ ಖೆಯ ಅಧಿಕಾರಿಗಳು ಸಿಬ್ಬಂದಿಗಳು ತಮ್ಮ ಪ್ರಾಣದ ಹಂಗು ತೊರೆದು ದಿನನಿತ್ಯ 24 ಗಂಟೆಗಳ ಕಾಲ ಸಾರ್ವಜನಿಕರ ಮಧ್ಯೆ ಕೆಲಸ ಮಾಡುವ ಸನ್ನಿವೇಶದಲ್ಲಿ ಸಾರ್ವಜನಿಕರಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಎಲ್ಲೆಂದರಲ್ಲಿ ಬೈಕ್ ಮತ್ತು ಇತರೆ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ, ಸಾರ್ವಜನಿಕರಿಗೆ ಅಡ್ಡಿ ಪಡಿಸುತ್ತಿದ್ದಾರೆ. ವಾಹನ ಸವಾರರಿಗೆ ಪ್ರಾಯೋಗಿಕವಾಗಿ ಒಂದು ವಾರಗಳ ಕಾಲ ಜಾಗೃತಿ ಮೂಡಿಸಲಾಗುತ್ತದೆ. ಮತ್ತೆ ಇದೇ ಕೆಲಸವನ್ನು ಮುಂದುವರೆಸಿದರೆ ಅಂತಹ ವಾಹನಗಳನ್ನು ಸೀಜ್ ಮಾಡಿ ಆನ್ಲೈನ್ ಮೂಲಕ ಒಂದು ಸಾವಿರ ರೂಪಾಯಿಗಳ ದಂಡ ಹಾಕಲಾಗುತ್ತದೆ ಎಂದು ತಿಳಿಸಿದರು.
ಎ.ಎಸ್.ಐ ಚಂದ್ರಶೇಖರ್, ವೆಂಕಟೇಶ್, ನಾಗರಾಜ್ ಸೇರಿದಂತೆ ಠಾಣೆಯ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.