ಜಗಳೂರು, ಆ.11- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಪಟ್ಟಣದ ಎನ್ಕೆಎಂ ಪ್ರೌಢಶಾಲೆ ವಿದ್ಯಾರ್ಥಿನಿ ಹೆಚ್.ಪಿ. ಭೂಮಿಕಾಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆವರಣದಲ್ಲಿ ಎನ್ಜಿಒ, ಬಿಆರ್ಸಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಬಿಇಓ ದಾರುಕೇಶ್ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೇ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿನಿಯ ತಂದೆ, ತಾಯಿ ಇಬ್ಬರೂ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಮಗಳ ಭವಿಷ್ಯಕ್ಕೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಶಾಂತೇಶ್ 625 ಕ್ಕೆ 619 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದು ಶಾಸಕರಿಗೆ ಇವರಿಬ್ಬರ ಮಾಹಿತಿ ನೀಡಲಾಗಿದೆ. ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳನ್ನು ಆಗಸ್ಟ್ 15 ರಂದು ವೇದಿಕೆಯಲ್ಲಿ ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೋಷಕರಾದ ಶಿಕ್ಷಕ ಬಸವರಾಜ್, ಶಿಕ್ಷಕಿ ಅನಿತಾ, ಬಿಆರ್ಸಿ ಗಿರೀಶ್, ಎನ್ಜಿಒ ತಾಲ್ಲೂಕು ಗೌರವಾಧ್ಯಕ್ಷ ಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಉಲೆಪ್ಪ, ಪ್ರಧಾನ ಕಾರ್ಯದರ್ಶಿ ಎಂ. ಪ್ರಕಾಶ್, ಬಡ್ತಿ ಮುಖ್ಯಶಿಕ್ಷಕರ ಸಂಘದ ಗೌರವಾಧ್ಯಕ್ಷ ಕೇಶವಮೂರ್ತಿ, ಶಿಕ್ಷಕ ಬಸವರಾಜ್ ಉಪಸ್ಥಿತರಿದ್ದರು.