ಹಾವೇರಿಯಲ್ಲಿ ಧಾರವಾಡ ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ವಿಶ್ವಾಸ
ಹಾವೇರಿ, ನ. 25- ವಿಧಾನ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಮತಗಳ ಅಂತರದಿಂದ ಮತದಾರರು ನನ್ನನ್ನು ಆಯ್ಕೆ ಮಾಡುತ್ತಾರೆ. ರಾಜ್ಯದಲ್ಲಿ 14 ಸ್ಥಾನಗಳಿಗಿಂತ ಹೆಚ್ಚು ಸ್ಥಾನವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಧಾರವಾಡ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ವ್ಯಕ್ತಪಡಿಸಿದರು.
ನಿನ್ನೆ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಹಾವೇರಿ ಜಿಲ್ಲೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದೇನೆ. ಎರಡು ಬಾರಿ ವಿಧಾನಪರಿಷತ್ ಸದಸ್ಯನಾಗಿದ್ದ ಸಮಯದಲ್ಲಿ ಈ ಜಿಲ್ಲೆಯನ್ನು ನೋಡಲ್ ಜಿಲ್ಲೆಯಾಗಿ ತೆಗೆದುಕೊಂಡು ನನ್ನ ಸಂಪೂರ್ಣ ಅನುದಾನವನ್ನು ಈ ಜಿಲ್ಲೆಯ ಅಭಿವೃದ್ಧಿಗೇ ನೀಡಿದ್ದೇನೆ. ಹಾಗಾಗಿ ನನಗೆ ಓಟು ಕೊಟ್ಟು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಗ್ರಾಮ ಪಂಚಾಯತಿಗಳಿಗೆ ಬಾರದ ಅನುದಾನ, ಅಭಿವೃದ್ಧಿಯಾಗದ ವಿಚಾರಗಳನ್ನು ಮುಂದಿಟ್ಟು ಕೊಂಡು ಮತ ಯಾಚನೆ ಮಾಡುತ್ತೇವೆ ಎಂದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದು, ಒಂದು ವರ್ಷದ ನಂತರ ಪ್ರಧಾನಿ ಎಚ್ಚೆತ್ತುಕೊಂಡರು, ನಾನು ತಪ್ಪು ಮಾಡಿದ್ದೇನೆ ಎನ್ನುವ ಅರಿವು ಅವರಿಗೆ ಆಗುವ ಹೆೋತ್ತಿಗೆ ದೇಶದಲ್ಲಿ 760 ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದಾರೆ. ಪ್ರತಿ ರೈತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಮನೋಹರ್ ತಹಶೀಲ್ದಾರ್, ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ, ವಿಧಾನ ಪರಿಷತ್ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಸ್.ಆರ್.ಪಾಟೀಲ ಮುಂತಾದವರು ಹಾಜರಿದ್ದರು.