ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ
ದಾವಣಗೆರೆ, ಸೆ.19- ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ನಗರದ ಡಾ.ಎಂ.ಸಿ.ಮೋದಿ ರಸ್ತೆಯಲ್ಲಿ ಮಹಾನಗರಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ, ಸಾರ್ವಜನಿ ಕರಿಂದ ಅಹವಾಲು ಸ್ವೀಕರಿಸಿ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 1,500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 10 ನಗರಪಾಲಿಕೆಗಳಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಯಡಿಯೂರಪ್ಪ ನಾಯಕತ್ವ ದಲ್ಲಿ ಈಗಾಗಲೇ ಹಲವು ಯೋಜನೆಗಳು ನೆರವೇರಿವೆ. ಕೇಂದ್ರ ಸರ್ಕಾರವು ರಾಜ್ಯದ ಹಲವು ಯೋಜನೆಗಳಿಗೆ ಹೆಚ್ಚಾಗಿ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದು, ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಜೊತೆ ಮಾತನಾಡಿದ್ದೇನೆ.
ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ 8 ರಿಂದ 10 ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ಗಳನ್ನು ಮಾಡಬೇಕು ಹಾಗೂ ರಾಜ್ಯಕ್ಕೆ 3 ಮೆಗಾ ಟೆಕ್ಸ್ಟೆಲ್ ಆಗಬೇಕು. ಆಟೋ ಮೊಬೈಲ್ ಕ್ಷೇತ್ರಗಳಲ್ಲಿ ಕ್ಲಸ್ಟರ್ ಹೆಚ್ಚಿಗೆ ಮಾಡಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಹಂತ ಹಂತವಾಗಿ ಇವುಗಳನ್ನು ಸಾಕಾರ ಮಾಡುವ ಭರವಸೆ ಹೊಂದಿದ್ದೇನೆ ಎಂದು ಹೇಳಿದರು.
ಸ್ಮಾರ್ಟ್ ಸಿಟಿಯೊಂದಿಗೆ ಹಲವಾರು ಕಾಮಗಾರಿಗಳನ್ನು ಒಂದೇ ಕಡೆ ಮಾಡಿದ್ದು, ದಾವಣಗೆರೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಎಸ್.ಸಿ.ಎಸ್.ಪಿ (ಪರಿಶಿಷ್ಟ ಜಾತಿ)ಯಡಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ 360 ಲಕ್ಷ ರೂ., ಕಾಮಗಾರಿಗಳಿಗೆ 1440 ಲಕ್ಷ ರೂ., ಹಾಗೂ ಟಿಎಸ್ಪಿ (ಪರಿಶಿಷ್ಟ ಪಂಗಡ) ದಡಿ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ 146.10 ಲಕ್ಷ ರೂ., ಕಾಮಗಾರಿಗಳಿಗೆ 584.40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನೂ ಸಾಮಾನ್ಯ ಕಾಮಗಾರಿಗಳಿಗೆ 5469.50 ಲಕ್ಷ ರೂ. ಮೀಸಲಿಡಲಾಗಿದೆ ಎಂದರು.
ಮಹಾನಗರ ಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 10 ಉದ್ಯಾನವನ ಗಳು, 2 ಕಾಲೇಜುಗಳಿಗೆ ಪರಿಕರ ಒದಗಿಸು ವುದು, 74.995 ಕಿ.ಮೀ ಸಿ.ಸಿ. ಚರಂಡಿ ನಿರ್ಮಾಣ, 03.750 ಕಿ.ಮೀ ಒಳಚರಂಡಿ ನಿರ್ಮಾಣ, 18.551 ಕಿ.ಮೀ ಡಾಂಬರ್ ರಸ್ತೆ, 17.932 ಕಿ.ಮೀ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ವಿಧಾನ ಪರಿ ಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್. ಶಿವಯೋಗಿ ಸ್ವಾಮಿ, ಪಾಲಿಕೆ ಮೇಯರ್ ಎಸ್.ಟಿ.ವೀರೇಶ್, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿ.ಪಂ. ಸಿಇಒ ವಿಜಯ ಮಹಾಂತೇಶ ದಾನಮ್ಮನವರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಉಪ ಮೇಯರ್ ಸೌಮ್ಯ ನರೇಂದ್ರಕುಮಾರ್, ಆಯುಕ್ತ ವಿಶ್ವನಾಥ್ ಮುದಜ್ಜಿ, ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್, ಕೆ.ಎಂ.ವೀರೇಶ್, ಎಲ್.ಡಿ. ಗೋಣೆಪ್ಪ ಇತರರು ಉಪಸ್ಥಿತರಿದ್ದರು.