ನಗರದಲ್ಲಿ ಎಐಡಿಎಸ್‍ಓ ನೇತೃತ್ವದಲ್ಲಿ ಪ್ರತಿಭಟನೆ
ದಾವಣಗೆರೆ, ಡಿ.20- ರಾಜ್ಯದ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿ ಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‍ಓ) ನೇತೃತ್ವ ದಲ್ಲಿ ನಗರದಲ್ಲಿ ಇಂದು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಿಂದ ಉಪವಿಭಾಗಾಧಿ ಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಲೇಜುಗಳ ವಿದ್ಯಾರ್ಥಿಗಳು, ಎಐಡಿಎಸ್ಓ ಪದಾಧಿಕಾರಿಗಳು, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಉಪವಿಭಾಗಾಧಿಕಾರಿ ಮುಖಾಂತರ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಸರ್ಕಾರ ಇನ್ನೂ ಖಾಯಂಗೊಳಿಸಿಲ್ಲ. ಅಲ್ಲದೆ, ಸಕಾಲದಲ್ಲಿ ನಿಗದಿತ ಗೌರವಧನ ನೀಡುತ್ತಿಲ್ಲ. ಹೀಗಾಗಿ, ಅತಿಥಿ ಉಪನ್ಯಾಸಕರು ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ತರಗತಿಗಳಲ್ಲಿ ಅತಿಥಿ ಉಪನ್ಯಾಸಕರು ಅತ್ಯಂತ ಶ್ರದ್ಧೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಶ್ರಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡುತ್ತಿದ್ದಾರೆ. ಆದರೆ, ಸರ್ಕಾರದ ನೀತಿಗಳಿಂದಾಗಿ ಅತಿಥಿ ಉಪನ್ಯಾಸಕರಿಗೆ ಗೌರವಯುತ ಬದುಕು ಮರಿಚೀಕೆಯಾಗಿದೆ ಎಂದು ಆಕ್ಷೇಪಿಸಿದರು.
ತಕ್ಷಣವೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸ ಬೇಕು. ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾಲೇಜು ಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸ ಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಜಿಲ್ಲಾ ಕಾರ್ಯದರ್ಶಿ ಪೂಜಾ ನಂದಿಹಳ್ಳಿ, ಕಿರಣ್, ಪುಷ್ಪಾ, ಕಾವ್ಯ, ಶಿವಕುಮಾರ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.