2ಜಿ ಎಥೆನಾಲ್‌ ಘಟಕಕ್ಕೆ ಶೀಘ್ರದಲ್ಲೇ ಭೂಮಿ ಪೂಜೆ

ರಸಗೊಬ್ಬರ ಕಾರ್ಖಾನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭ : ಜಿ.ಎಂ. ಸಿದ್ದೇಶ್ವರ

ದಾವಣಗೆರೆ, ಜೂ. 2 – ಜಿಲ್ಲೆಯಲ್ಲಿ ರಸಗೊಬ್ಬರ ಕಾರ್ಖಾನೆ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ 2ಜಿ ಎಥೆನಾಲ್ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ.

ಎನ್‌ಡಿಎ ಎರಡನೇ ಅವಧಿಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದಿಲ್ಲಿ ಜಿಎಂಐಟಿ ಅತಿಥಿ ಗೃಹದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಹರಿಹರದ ಸಾರಥಿ ಬಳಿ 6,500 ಕೋಟಿ ರೂ. ವೆಚ್ಚದಲ್ಲಿ ರಸಗೊಬ್ಬರ ಕಾರ್ಖಾನೆ ನಿರ್ಮಾಣಕ್ಕೆ 330 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದರು.

ಹರಿಹರದ ಹನಗವಾಡಿ ಬಳಿ 966 ಕೋಟಿ ರೂ. ವೆಚ್ಚದ 2ಜಿ ಎಥೆನಾಲ್ ಘಟಕ ನಿರ್ಮಾಣಕ್ಕೆ ಕೇಂದ್ರ ಪರಿಸರ ಸಚಿವಾಲಯ ದಿಂದ ನಿರಾಕ್ಷೇಪಣಾ ಪತ್ರ ದೊರೆಯುವ ಹಂತದಲ್ಲಿದ್ದು, ಶೀಘ್ರದಲ್ಲೇ ಭೂಮಿಪೂಜೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಲೋಕಸಭಾ ಕ್ಷೇತ್ರದಲ್ಲಿ 166 ಕಿ.ಮೀ. ಉದ್ದದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು 140 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಟೆಂಡರ್  ಪ್ರಕ್ರಿಯೆ ಚಾಲನೆಯಲ್ಲಿದೆ ಎಂದವರು ಹೇಳಿದರು.

ನಗರದ ಜೆ.ಹೆಚ್.ಪಟೇಲ್  ಬಡಾವಣೆ ಯಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಕಟ್ಟಡದಲ್ಲಿ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್‌ಟಿಪಿಐ) ಇನ್‌ಕ್ಯುಬೇಷನ್ ಸೆಂಟರ್ ಕಾರ್ಯಾರಂಭ ಮಾಡಲಿದೆ ಎಂದು ಸಿದ್ದೇಶ್ವರ ಇದೇ ಸಂದರ್ಭದಲ್ಲಿ ತಿಳಿಸಿದರು.

ನಗರದ ಸಿ.ಜಿ. ಆಸ್ಪತ್ರೆ ಆವರಣದಲ್ಲಿ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ 21 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ತಾಯಿ – ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ ತಿಂಗಳ ಒಳಗೆ ಭೂಮಿ ಪೂಜೆ ನೆರವೇರಿಸ ಲಾಗುವುದು ಎಂದು ಅವರು ಹೇಳಿದ್ದಾರೆ.

ನಗರದ ಡಿಸಿಎಂ ಟೌನ್‌ಶಿಪ್‌ ಬಳಿ ಲೆವೆಲ್ ಕ್ರಾಸಿಂಗ್‌ಗೆ ಇನ್ನೊಂದು ಸ್ಟೀಲ್ ಗರ್ಡರ್ ನಿರ್ಮಾಣ ಮಾಡಲು 10 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

ನಗರದ ಇಎಸ್‌ಐ ಆಸ್ಪತ್ರೆಯನ್ನು ಮೇಲ್ದರ್ಜೆ ಗೇರಿಸಲು 25 ಕೋಟಿ ರೂ.ಗಳ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ ಅವರು, ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ – ದೇವರಹಳ್ಳಿ – ಹೊದಿಗೆರೆ – ಅಮ್ಮನಗುಡ್ಡ ಈ ಸರ್ಕೀಟ್‌ ಅನ್ನು ಕೇಂದ್ರ ಸರ್ಕಾರದ ಸ್ವದೇಶಿ ದರ್ಶನ್ ಯೋಜನೆಯಡಿ 56 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಜಗಳೂರು ತಾಲ್ಲೂಕಿನ ಮಾಗಡಿ ಬಳಿ 10 ಎಕರೆ ಜಾಗದಲ್ಲಿ ಕೇಂದ್ರ ಸರ್ಕಾರದ ಬುಡಕಟ್ಟು ವರ್ಗಗಳ ಸಚಿವಾಲಯದಿಂದ ಪರಿಶಿಷ್ಟ ಪಂಗಡದವರಿಗಾಗಿಯೇ ಏಕಲವ್ಯ ವಸತಿ ಶಾಲೆ ಪ್ರಾರಂಭಿಸಲು ಸಿದ್ಧತೆ ನಡೆದಿದೆ ಎಂದೂ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ವಿ. ರಾಮಚಂದ್ರ, ಮೇಯರ್ ಬಿ.ಜಿ. ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್, ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!